Breaking
12 Oct 2026, Mon

ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆ ಖಂಡನೀಯ: ಶೇಖರ್ ಲಾಯಿಲ

ಬೆಳ್ತಂಗಡಿ: ಕುಂದಾಪುರ ಸರ್ಕಾರಿ ಆಸ್ಪತ್ರೆಯ ಅಕ್ರಮ ಹಾಗೂ ಭ್ರಷ್ಟಾಚಾರದ ಕುರಿತು ವರದಿ ಪ್ರಕಟಿಸಿದ ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ವೈದ್ಯ ಡಾ. ಮಹೇಂದ್ರ ಶೆಟ್ಟಿ ಬೀದಿರೌಡಿಗಳಂತೆ ಸಾರ್ವಜನಿಕವಾಗಿ ಹಲ್ಲೆ ನಡೆಸಿರುವುದು ಅತ್ಯಂತ ಖಂಡನೀಯ.

ಇದು ಪತ್ರಿಕಾ ಸ್ವಾತಂತ್ರ್ಯ ಹಾಗೂ ಪ್ರಜಾಪ್ರಭುತ್ವದ ಮೇಲಿನ ಹಲ್ಲೆಗೆ ಸಮಾನ ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ ಸಂಚಾಲಕ ಶೇಖರ್ ಎಲ್. ಲಾಯಿಲ ತಿಳಿಸಿದ್ದಾರೆ.

ಕುಂದಾಪುರ ಸರ್ಕಾರಿ ಆಸ್ಪತ್ರೆಯ ಅಕ್ರಮ ಹಾಗೂ ಭ್ರಷ್ಟಾಚಾರದ ವಿರುದ್ಧ ಜನಸಾಮಾನ್ಯರ ಧ್ವನಿಯಾಗಿ ಶ್ರೀಕಾಂತ್ ಹೆಮ್ಮಾಡಿ ಪತ್ರಿಕೆಯಲ್ಲಿ ವರದಿ ಪ್ರಕಟಿಸಿದ್ದರು.

ಇದರಿಂದಾಗಿ ಅವರ ಮೇಲೆ ಡಾ. ಮಹೇಂದ್ರ ಶೆಟ್ಟಿ ಹಲ್ಲೆ ನಡೆಸಿರುವುದು ಸಹಿಸಲು ಸಾಧ್ಯವಿಲ್ಲ. ಇಂತಹ ಘಟನೆಗಳು ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸುವ ಪತ್ರಕರ್ತರಲ್ಲಿ ಭಯದ ವಾತಾವರಣ ಸೃಷ್ಟಿಸುತ್ತವೆ ಎಂದು ಅವರು ಹೇಳಿದ್ದಾರೆ.

ವೈದ್ಯ ವೃತ್ತಿಗೆ ಕಳಂಕ ತರುವಂತಹ ಕೃತ್ಯ ಎಸಗಿರುವ ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕೇವಲ ಅಮಾನತು ಮಾಡುವ ಬದಲು ಸೇವೆಯಿಂದಲೇ ವಜಾಗೊಳಿಸಬೇಕು ಎಂದು ಶೇಖರ್ ಲಾಯಿಲ ಒತ್ತಾಯಿಸಿದ್ದಾರೆ.

ಸಂವಿಧಾನದ ಆಶಯಗಳನ್ನು ಎತ್ತಿಹಿಡಿದು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವ ಪತ್ರಕರ್ತರ ಮೇಲೆ ನಡೆಯುವ ಹಲ್ಲೆಗಳನ್ನು ಯಾವುದೇ ಕಾರಣಕ್ಕೂ ಸಹಿಸಬಾರದು.

ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಪತ್ರಕರ್ತರು ನಿರ್ಭೀತಿಯಿಂದ ಕೆಲಸ ಮಾಡುವಂತಾಗಲು ರಾಜ್ಯ ಸರ್ಕಾರ ಅವರ ಸುರಕ್ಷತೆಯನ್ನು ಖಚಿತಪಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಪತ್ರಕರ್ತರ ಮೇಲಿನ ಹಲ್ಲೆ, ದೌರ್ಜನ್ಯ ಹಾಗೂ ಹಿಂಸೆಯನ್ನು ತಡೆಗಟ್ಟಲು ವಿಶೇಷ ಕಾನೂನು ಜಾರಿಗೊಳಿಸಬೇಕು ಎಂದು ಶೇಖರ್ ಲಾಯಿಲ ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *