ಬೆಳ್ತಂಗಡಿ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯಾಗಿಸಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶ್ರೀಕಾಂತ್ ನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಶ್ರೀಕಾಂತ್ (21) ಎಂದು ಗುರುತಿಸಲಾಗಿದೆ.

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ 16 ವರ್ಷದ ಬಾಲಕಿಯೊಂದಿಗೆ ಕಳೆದ ವರ್ಷದ ಸೆಪ್ಟೆಂಬರ್‌ನಿಂದ ನವೆಂಬರ್ ಅವಧಿಯಲ್ಲಿ ಆರೋಪಿ ಬಲವಂತವಾಗಿ ಅತ್ಯಾಚಾರ ಎಸಗಿ, ವಿಷಯವನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿದೆ. ಘಟನೆ ಕುರಿತು ಬಾಲಕಿ ಆರಂಭದಲ್ಲಿ ಯಾರಿಗೂ ತಿಳಿಸಿರಲಿಲ್ಲ ಎನ್ನಲಾಗಿದೆ. ಬಳಿಕ ಬಾಲಕಿ ಗರ್ಭಿಣಿಯಾಗಿದ್ದು, ಆಗಸ್ಟ್ 22ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.

ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಲು ಯತ್ನಿಸಿದ್ದ ಎನ್ನಲಾಗಿದೆ. ಬೆಂಗಳೂರಿನ ದೊಡ್ಡಬಳ್ಳಾಪುರದಿಂದ ತನ್ನ ಸ್ವಗ್ರಾಮವಾದ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಹಿಂದೂಪುರಕ್ಕೆ ತೆರಳಲು ಪ್ರಯತ್ನಿಸುತ್ತಿದ್ದ ವೇಳೆ ಪೊಲೀಸರು ದೊಡ್ಡಬಳ್ಳಾಪುರದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿ ಆಂಧ್ರಪ್ರದೇಶ ಮೂಲದವನಾಗಿದ್ದು, ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಧರ್ಮಸ್ಥಳದ ಯುವತಿಯನ್ನು ಪರಿಚಯ ಮಾಡಿಕೊಂಡು ಬಳಿಕ ಆಕೆಯೊಂದಿಗೆ ಸಂಬಂಧ ಬೆಳೆಸಿಕೊಂಡಿದ್ದ ಎಂದು ಆರೋಪಿಸಲಾಗಿದೆ. ಬಂಧಿತ ಆರೋಪಿಯನ್ನು ಮಂಗಳೂರಿನ ಪೋಕ್ಸೋ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.







