ಹುಳಿಯಾರು: ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತೂಬರೇಹಳ್ಳಿ ಗೇಟ್ (ಗೋಡೆಕೆರೆ ಗೇಟ್) ಬಳಿ ಅತಿಯಾದ ವೇಗ ಹಾಗೂ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ 3 ವರ್ಷದ ಮಗು ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ(ಆ.28) ರಾತ್ರಿ ನಡೆದಿದೆ.

ರಾತ್ರಿ ಸುಮಾರು 8 ಗಂಟೆಗೆ ಘಟನೆ ಸಂಭವಿಸಿದ್ದು, ಕೆ.ಬಿ. ಕ್ರಾಸ್ ಕಡೆಯಿಂದ ಚಿಕ್ಕನಾಯಕನಹಳ್ಳಿ ಕಡೆಗೆ ಬರುತ್ತಿದ್ದ ಕಾರು ಹಾಗೂ ಚಿಕ್ಕನಾಯಕನಹಳ್ಳಿಯಿಂದ ತುರುವೇಕೆರೆ ಕಡೆಗೆ ತೆರಳುತ್ತಿದ್ದ ಕಾರು ಮುಖಾಮುಖಿಯಾಗಿ ಡಿಕ್ಕಿಯಾಗಿವೆ. ಡಿಕ್ಕಿಯ ರಭಸಕ್ಕೆ ಎರಡೂ ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಕಾರಿನೊಳಗೆ ಸಿಲುಕಿಕೊಂಡಿದ್ದರು.

ಅಪಘಾತದಲ್ಲಿ ಕೆ.ಬಿ. ಕ್ರಾಸ್ ಕಡೆಯಿಂದ ಬಂದ ಕಾರಿನಲ್ಲಿದ್ದ ಪಟ್ಟಣದ ನಿವಾಸಿಗಳಾದ ವಿವೇಕ್ (31) ಹಾಗೂ ಅನಿಲ್ (32) ಮೃತಪಟ್ಟಿದ್ದಾರೆ. ಮತ್ತೊಂದು ಕಾರಿನಲ್ಲಿದ್ದ ದಾವುದ್ ಪಾಷಾ (45) ಹಾಗೂ 3 ವರ್ಷದ ಮಗು ಅನಮ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಚಿಕ್ಕನಾಯಕನಹಳ್ಳಿಯ ಅನಿಲ್, ತುರುವೇಕೆರೆಯ ಯಾಸ್ಮಿನ್ ತಾಜ್, ಸೀಮಾ ಹಾಗೂ ಆಸ್ಮಾ ಅವರನ್ನು ಸ್ಥಳೀಯರು ಹಾಗೂ ಆಂಬುಲೆನ್ಸ್ ಸಿಬ್ಬಂದಿ ರಕ್ಷಿಸಿ, ಪ್ರಥಮ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.

ಘಟನೆ ತಿಳಿಯುತ್ತಿದ್ದಂತೆ ಮೃತರ ಕುಟುಂಬಸ್ಥರು ಸ್ಥಳಕ್ಕೆ ಧಾವಿಸಿದ್ದು, ಅವರ ಆಕ್ರಂದನ ಮುಗಿಲುಮುಟ್ಟಿತ್ತು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಗೋಪಾಲ್, ಶಾಸಕ ಸಿ.ಬಿ. ಸುರೇಶ್ ಬಾಬು ಹಾಗೂ ತಹಸೀಲ್ದಾರ್ ಮಮತಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯ ಸ್ವಯಂಸೇವಕರು ಹಾಗೂ ಆಂಬುಲೆನ್ಸ್ ಸಿಬ್ಬಂದಿ ಸಮಯಪ್ರಜ್ಞೆ ಮೆರೆದು ಕಾರಿನೊಳಗೆ ಸಿಲುಕಿದ್ದವರನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾದರು.


