Breaking
30 Aug 2026, Sun

ಪೊಳಲಿ ದ್ವಾರ–ಬ್ರಹ್ಮಶ್ರೀ ನಾರಾಯಣಗುರು ವೃತ್ತ: ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಜಂಟಿ ಸರ್ವೆ

ಬಂಟ್ವಾಳ: ಪೊಳಲಿ ದ್ವಾರ ಕೈಕಂಬದಿಂದ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ವೃತ್ತದವರೆಗೆ ನಿತ್ಯ ಉಂಟಾಗುತ್ತಿರುವ ಸಂಚಾರ ದಟ್ಟಣೆ ಹಾಗೂ ಟ್ರಾಫಿಕ್ ಜಾಮ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ದಿಶಾ ಸಮಿತಿ ಸಭೆಯಲ್ಲಿ ಪ್ರಸ್ತಾಪಿಸಿದರು.

ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಅಧ್ಯಕ್ಷತೆಯಲ್ಲಿ ನಡೆದ ದಿಶಾ ಸಮಿತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಮಾರ್ಗದಲ್ಲಿ ವಾಹನಗಳ ಸಂಚಾರ ಹೆಚ್ಚಾಗಿರುವುದರಿಂದ ಪ್ರತಿನಿತ್ಯ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆ ಅಗಲೀಕರಣ ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಂಡು ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿದರು.

ಈ ಹಿನ್ನೆಲೆಯಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಜಿಲ್ಲಾಧಿಕಾರಿಯವರಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ರಾಷ್ಟ್ರೀಯ ಹೆದ್ದಾರಿ ಇಲಾಖೆ ಹಾಗೂ ಸಂಬಂಧಿಸಿದ ಇತರ ಇಲಾಖೆಗಳ ಅಧಿಕಾರಿಗಳೊಂದಿಗೆ ಶೀಘ್ರ ಜಂಟಿ ಸರ್ವೆ ನಡೆಸಿ, ಸಮಸ್ಯೆ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದರು.

400 ಕೆ.ವಿ. ವಿದ್ಯುತ್ ಮಾರ್ಗ: ಕೃಷಿಕರಿಗೆ ಸೂಕ್ತ ಪರಿಹಾರಕ್ಕೆ ಒತ್ತಾಯ

ಉಡುಪಿ–ಕಾಸರಗೋಡು ನಡುವೆ ಹಾದುಹೋಗುವ 400 ಕೆ.ವಿ. ವಿದ್ಯುತ್ ಪ್ರಸರಣ ಮಾರ್ಗದಿಂದ ಬಂಟ್ವಾಳ ತಾಲೂಕಿನ ಹಲವು ಕೃಷಿಕರ ಜಮೀನುಗಳು ಬಾಧಿತವಾಗಿರುವ ವಿಚಾರವೂ ಸಭೆಯಲ್ಲಿ ಪ್ರಸ್ತಾಪವಾಯಿತು. ವಿದ್ಯುತ್ ಮಾರ್ಗಕ್ಕಾಗಿ ಜಮೀನು ಕಳೆದುಕೊಳ್ಳುತ್ತಿರುವ ಕೃಷಿಕರಿಗೆ ಅವರ ಜಮೀನಿನ ಮೌಲ್ಯಕ್ಕೆ ಅನುಗುಣವಾಗಿ ಸೂಕ್ತ ಪರಿಹಾರ ನೀಡುವಂತೆ ಶಾಸಕ ರಾಜೇಶ್ ನಾಯ್ಕ್ ಅವರು ಜಿಲ್ಲಾಧಿಕಾರಿಯವರ ಗಮನ ಸೆಳೆದರು.

ಈ ವೇಳೆ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು, ವಿದ್ಯುತ್ ಮಾರ್ಗ ಕಾಮಗಾರಿಗೆ ಸಂಬಂಧಿಸಿದಂತೆ ಕೆಲವು ಪ್ರದೇಶಗಳಲ್ಲಿ ಪೊಲೀಸ್ ಭದ್ರತೆಯನ್ನು ಬಳಸಿಕೊಂಡು ಕೃಷಿಕರ ಮೇಲೆ ಒತ್ತಡ ಹೇರುತ್ತಿರುವ ಬಗ್ಗೆ ದೂರುಗಳು ಬಂದಿವೆ ಎಂದು ತಿಳಿಸಿದರು. ಕೃಷಿಕರನ್ನು ಹೆದರಿಸುವ ಅಥವಾ ಗದರಿಸುವ ರೀತಿಯ ಕ್ರಮಗಳು ಸರಿಯಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಕಾನೂನುಬದ್ಧವಾಗಿ ಅಗತ್ಯವಿದ್ದ ಸಂದರ್ಭಗಳಲ್ಲಿ, ಸಂಬಂಧಿಸಿದ ಕಂದಾಯ ಅಧಿಕಾರಿಗಳು ಪೊಲೀಸ್ ಇಲಾಖೆಯ ಸಹಾಯವನ್ನು ಕೋರಿದಲ್ಲಿ ಮಾತ್ರ ಪೊಲೀಸ್ ಮಧ್ಯಪ್ರವೇಶವಾಗುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಸೂಚನೆ ನೀಡಲಾಗಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.

ಕೃಷಿಕರ ಹಿತಾಸಕ್ತಿಗೆ ಧಕ್ಕೆಯಾಗದಂತೆ ಹಾಗೂ ಕಾನೂನುಬದ್ಧ ಪ್ರಕ್ರಿಯೆಯಂತೆ ಕಾಮಗಾರಿ ಮುಂದುವರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತದ ವತಿಯಿಂದ ಭರವಸೆ ನೀಡಲಾಯಿತು.

Leave a Reply

Your email address will not be published. Required fields are marked *