ಮಂಗಳೂರು: ಮೊಬೈಲ್ ವಿಚಾರವಾಗಿ ನಡೆದ ಜಗಳದಲ್ಲಿ ವ್ಯಕ್ತಿಯೋರ್ವ ತನ್ನ ಸಹೋದರನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಮಂಗಳೂರಿನ ಬಿಜೈ ಕೊಟ್ಟಾರ ಕ್ರಾಸ್ ಬಳಿ ರವಿವಾರ ತಡರಾತ್ರಿ ನಡೆದಿದೆ.

ಘಟನೆಯಲ್ಲಿ ಅಡಿವೆಪ್ಪ (40) ಮೃತಪಟ್ಟಿದ್ದು, ಅವರ ತಮ್ಮ ರಾಜು (36) ಕೊಲೆ ಆರೋಪಿಯಾಗಿದ್ದಾರೆ.
ಮೂಲತಃ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮೂಲದವರಾದ ಇವರು ಕೊಟ್ಟಾರ ಕ್ರಾಸ್ನ ಬಾಡಿಗೆ ಮನೆಯಲ್ಲಿ ತಾಯಿ ಹಾಗೂ ಇಬ್ಬರು ಸಹೋದರರು ವಾಸವಾಗಿದ್ದರು. ತಾಯಿ ಸಣ್ಣ ಗೂಡಂಗಡಿ ನಡೆಸುತ್ತಿದ್ದು, ಇಬ್ಬರು ಸಹೋದರರು ಕೂಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ವಿಪರೀತ ಮದ್ಯಪಾನದ ಚಟ ಹೊಂದಿದ್ದ ಸಹೋದರರ ನಡುವೆ ರವಿವಾರ ರಾತ್ರಿ ಸುಮಾರು 10.30ರಿಂದ 11 ಗಂಟೆಯ ಅವಧಿಯಲ್ಲಿ ಜಗಳ ನಡೆದಿದ್ದು, ಅದು ತೀವ್ರ ಸ್ವರೂಪ ಪಡೆದುಕೊಂಡಿದೆ. ಅಂಗಡಿ ಮುಚ್ಚಿ ಮನೆಗೆ ಬಂದ ತಾಯಿ, ದೊಡ್ಡ ಮಗ ಅಡಿವೆಪ್ಪ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡಿದ್ದಾರೆ.

ಕೂಡಲೇ ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅದಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಮೊಬೈಲ್ ವಿಚಾರಕ್ಕೆ ಸಂಬಂಧಿಸಿದಂತೆ ಅಣ್ಣ-ತಮ್ಮನ ನಡುವೆ ಜಗಳ ನಡೆದಿದ್ದು, ಈ ವೇಳೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.

ಸ್ಥಳಕ್ಕೆ ಉರ್ವ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿ ರಾಜುವಿನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.


