ಮಂಗಳೂರು: ರಾಜ್ಯದಲ್ಲಿ ಆಹಾರ ಸುರಕ್ಷತೆ ಹಾಗೂ ಗುಣಮಟ್ಟವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಆಹಾರ ಇಲಾಖೆಯು ತಪಾಸಣಾ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಿದೆ. ಈಗಾಗಲೇ ಹಲವು ಆಹಾರ ತಯಾರಿಕಾ ಕೇಂದ್ರಗಳಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ಈ ತಪಾಸಣಾ ಅಭಿಯಾನವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಬುಧವಾರ ತಿಳಿಸಿದ್ದಾರೆ.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರ ಅನುಕೂಲಕ್ಕಾಗಿ ಆಹಾರ ಇಲಾಖೆಯು ಕ್ಯೂಆರ್ ಕೋಡ್ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಇದರ ಮೂಲಕ ಸಾರ್ವಜನಿಕರಿಂದ ಬರುವ ದೂರುಗಳ ಆಧಾರದ ಮೇಲೆ ನೇರ ತಪಾಸಣೆ ನಡೆಸಲಾಗುತ್ತಿದೆ ಎಂದರು.

ಮಂಗಳೂರಿನಲ್ಲಿ ಕ್ಯೂಆರ್ ಕೋಡ್ ಮೂಲಕ ಬಂದ ದೂರಿನ ಮೇರೆಗೆ ಈಗಾಗಲೇ ಎರಡು ಪ್ರಮುಖ ಮಳಿಗೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಮುಂಬರುವ ದಿನಗಳಲ್ಲಿ ರಾಜ್ಯದ ಎಲ್ಲಾ ಪಿಜಿಗಳಲ್ಲಿ ಕಡ್ಡಾಯವಾಗಿ ಶುಚಿತ್ವ ಹಾಗೂ ಆಹಾರದ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಸೂಚನೆ ನೀಡಲಾಗಿದೆ. ನಿಯಮಗಳನ್ನು ಪಾಲಿಸದ ಸಂಸ್ಥೆಗಳ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಯು.ಟಿ. ಖಾದರ್ ಎಚ್ಚರಿಸಿದರು.


