ಬೆಳ್ತಂಗಡಿ: ನೆರಿಯ ಗ್ರಾಮದ ಬಾಂಜಾರು ಮಲೆಕುಡಿಯ ಕಾಲೋನಿಯ ಜಮೀನಿನ ಕುರಿತು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ದಾಖಲಿಸಿರುವ ರಿಟ್ ಅರ್ಜಿ ಸಂಖ್ಯೆ 3639/2007 ಸೇರಿದಂತೆ ಇತರೆ ಪ್ರಕರಣಗಳನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರನ್ನು ಬೆಂಗಳೂರಿನ ನಿವಾಸದಲ್ಲಿ ಬುಧವಾರ ಭೇಟಿಯಾಗಿ ಮನವಿ ಸಲ್ಲಿಸಲಾಯಿತು.

ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಬಾಂಜಾರು ಮಲೆಕುಡಿಯ ಕಾಲೋನಿಯಲ್ಲಿ 47 ಕುಟುಂಬಗಳು ಶತಮಾನಗಳಿಂದ ವಾಸವಾಗಿದ್ದು, ಈ ಪೈಕಿ 37 ಕುಟುಂಬಗಳಿಗೆ ಭೂನ್ಯಾಯ ಮಂಡಳಿಯಿಂದ ಭೂಸುಧಾರಣಾ ಕಾಯ್ದೆಯಡಿ ಜಮೀನು ಮಂಜೂರಾಗಿದೆ. ಆದರೆ, ಈ ಜಮೀನು ಮಂಜೂರಾತಿಯನ್ನು ರದ್ದುಪಡಿಸುವಂತೆ ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದೆ. ಇದೇ ಜಮೀನಿಗೆ ಸಂಬಂಧಿಸಿದಂತೆ ಇತರೆ ಪ್ರಕರಣಗಳೂ ದಾಖಲಾಗಿರುವುದರಿಂದ ಕುಟುಂಬಗಳು ತೀವ್ರ ಆತಂಕಕ್ಕೆ ಒಳಗಾಗಿವೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಕಾಲೋನಿಯ ಕುಟುಂಬಗಳು ತಲಾ ಸುಮಾರು 4ರಿಂದ 6 ಎಕರೆ ಜಮೀನು ಹೊಂದಿದ್ದು, ಮನೆ ನಿರ್ಮಿಸಿಕೊಂಡು ಕೃಷಿ ಚಟುವಟಿಕೆ ನಡೆಸಿಕೊಂಡು ಜೀವನ ಸಾಗಿಸುತ್ತಿವೆ. ಪ್ರಕರಣಗಳ ಹಿನ್ನೆಲೆಯಲ್ಲಿ ತಮ್ಮ ಜಮೀನು ಕಳೆದುಕೊಳ್ಳುವ ಭೀತಿ ಎದುರಾಗಿದೆ ಎಂದು ಮನವಿದಾರರು ತಿಳಿಸಿದ್ದಾರೆ. ಹೀಗಾಗಿ ಬಾಂಜಾರು ಮಲೆಕುಡಿಯ ಕಾಲೋನಿಯ ಜಮೀನಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ದಾಖಲಿಸಿರುವ ರಿಟ್ ಅರ್ಜಿ ಹಾಗೂ ಇತರೆ ಪ್ರಕರಣಗಳನ್ನು ತಕ್ಷಣ ವಾಪಸ್ ಪಡೆಯುವ ಕುರಿತು ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಐತಿಹಾಸಿಕ ತೀರ್ಮಾನ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಪ್ರಮುಖರು ಹರಿಪ್ರಸಾದ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ತಾಲೂಕು ಪ್ರಧಾನ ಕಾರ್ಯದರ್ಶಿ ಜಯಾನಂದ ಪಿಲಿಕಲ ಹಾಗೂ ಸಂಚಾಲಕ ಶೇಖರ್ ಲಾಯಿಲ ಉಪಸ್ಥಿತರಿದ್ದರು.







