ಮಂಗಳೂರು: ಕಾರ್ಕಳದಿಂದ ಮಂಗಳೂರಿನತ್ತ ತೆರಳುತ್ತಿದ್ದ ಎಕ್ಸ್ಪ್ರೆಸ್ ಬಸ್ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿದ ಘಟನೆ ಶುಕ್ರವಾರ ಬೆಳಗ್ಗೆ ಪಣಂಬೂರು ಎಂಸಿಎಫ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಬಸ್ನಲ್ಲಿ 50ಕ್ಕೂ ಅಧಿಕ ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಅಪಘಾತದ ಬಳಿಕ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಳ್ಮಣ್ ನಿವಾಸಿ ಆದಿತ್ಯ ಎಂಬ ಪ್ರಯಾಣಿಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಸ್ಥಳಕ್ಕೆ ಧಾವಿಸಿದರು. ಸ್ಥಳೀಯರ ಸಹಕಾರದೊಂದಿಗೆ ಬಸ್ನೊಳಗೆ ಸಿಲುಕಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರಗೆ ಕರೆತರಲಾಯಿತು.

ಬಸ್ ರಸ್ತೆ ಬದಿಯ ಚರಂಡಿಗೆ ಉರುಳಿದ ಪರಿಣಾಮ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡಚಣೆ ಉಂಟಾಯಿತು. ಪೊಲೀಸರು ಸ್ಥಳದಲ್ಲಿ ಪರಿಶೀಲನೆ ನಡೆಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.
ಘಟನೆಗೆ ಸಂಬಂಧಿಸಿದಂತೆ ಈವರೆಗೆ ಯಾವುದೇ ಅಧಿಕೃತ ಪ್ರಕರಣ ದಾಖಲಾಗಿಲ್ಲ ಎಂದು ಸಂಚಾರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.


