ಬೆಳ್ತಂಗಡಿ: ಪೌರ ಕಾರ್ಮಿಕರು ಸೇರಿದಂತೆ ಪಂಚಾಯತ್ ವ್ಯಾಪ್ತಿಯ ಸ್ವಚ್ಛತಾ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರದ ಹಂತದಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು. ಕಾಂಗ್ರೆಸ್ ಸರ್ಕಾರ ಅತ್ಯಂತ ದುರ್ಬಲ ವರ್ಗದವರ ಪರವಾಗಿ ಕೆಲಸ ಮಾಡುತ್ತಿದೆ ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ. ರಘು ಹೇಳಿದರು.

ಸೋಮವಾರ ಧರ್ಮಸ್ಥಳದ ಅಧಿಕೃತ ಭೇಟಿಯ ಸಂದರ್ಭದಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪೌರ ಹಾಗೂ ಸ್ವಚ್ಛತಾ ಕಾರ್ಮಿಕರನ್ನು ಉದ್ದೇಶಿಸಿ ಅವರು ಮಾತನಾಡಿದರು.
ಸ್ವಚ್ಛತಾ ಕಾರ್ಮಿಕರ ಬದುಕಿಗೆ ಹೊಸ ಚೈತನ್ಯ ನೀಡುವ ನಿಟ್ಟಿನಲ್ಲಿ ಸರ್ಕಾರದ ಕೆಲ ನಿಯಮಾವಳಿಗಳ ಬದಲಾವಣೆಗೆ ಸಂಬಂಧಿಸಿ ಮುಖ್ಯಮಂತ್ರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ನಗರಾಭಿವೃದ್ಧಿ ಸಚಿವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರೊಂದಿಗೆ ಭೇಟಿಯಾಗಿ ಚರ್ಚಿಸುವುದಾಗಿ ಪಿ. ರಘು ತಿಳಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮಾತನಾಡಿ, “ನಮ್ಮ ಸರ್ಕಾರ ಧ್ವನಿ ಇಲ್ಲದವರ ಧ್ವನಿಯಾಗಿ ಕೆಲಸ ಮಾಡುತ್ತಿದೆ. ಸ್ವಚ್ಛತಾ ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ದೃಢ ನಿರ್ಧಾರ ಕೈಗೊಳ್ಳಲಿದೆ.
ತಾಲೂಕಿಗೆ ಪ್ರಥಮ ಬಾರಿಗೆ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರ ಭೇಟಿ ಮಹತ್ವದ ಹೆಜ್ಜೆಯಾಗಿದೆ. ನಿಮ್ಮ ಸಮಸ್ಯೆಗಳನ್ನು ಸರ್ಕಾರದ ಮಟ್ಟದಲ್ಲಿ ಬಗೆಹರಿಸಲು ನಾನು ಸದಾ ನಿಮ್ಮೊಂದಿಗೆ ಸೇತುವೆಯಾಗಿ ಕೆಲಸ ಮಾಡುತ್ತೇನೆ” ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಹಾಗೂ ಪಟ್ಟಣ ಮತ್ತು ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ಪರವಾಗಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ. ರಘು ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ (ಗ್ರಾಮೀಣ) ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಪೌರ ಕಾರ್ಮಿಕ ಸಂಘದ ಅಧ್ಯಕ್ಷ ಸುರೇಶ್ ಸುದೆಮುಗೇರು, ಕಾರ್ಯದರ್ಶಿ ಚಂದ್ರಭೋವಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶೇಖರ್ ಕುಕ್ಕೇಡಿ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಈಶ್ವರ ಭಟ್ ಮಾಯಿಲತ್ತೋಡಿ, ಪ್ರಶಾಂತ್ ವೇಗಸ್ ಮೊದಲಾದವರು ಉಪಸ್ಥಿತರಿದ್ದರು.




