Breaking
11 Sep 2026, Fri

ಬಂಟ್ವಾಳ: ಜಿಲ್ಲಾ ಅತ್ಯುತ್ತಮ ಶಿಕ್ಷಕ ಕೆ. ರವೀಂದ್ರ ನಾಯಕ್‌ಗೆ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಗೌರವ

ಸಿದ್ದಕಟ್ಟೆ: ದಕ್ಷಿಣ ಕನ್ನಡ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯ ಹಾಗೂ ಬೆಳ್ತಂಗಡಿ ತಾಲೂಕು ವೇಣೂರು ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಕನ್ನಡ ಶಿಕ್ಷಕ ಕೆ. ರವೀಂದ್ರ ನಾಯಕ್ ಕರ್ಪೆ ಅವರನ್ನು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಗೌರವಿಸಲಾಯಿತು.

ಸಂಘದ ಬೆಳ್ಳಿಪ್ಪಾಡಿ ಕೃಷ್ಣ ರೈ ರೈತ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅವರು ಗೌರವ ಸಲ್ಲಿಸಿ ಮಾತನಾಡಿ, ಶಿಕ್ಷಕರು ಮಕ್ಕಳಿಗೆ ಶಿಕ್ಷಣ ನೀಡುವುದರ ಜೊತೆಗೆ ಅವರಲ್ಲಿರುವ ನ್ಯೂನತೆಗಳನ್ನು ಸರಿಪಡಿಸಿ, ತಪ್ಪುಗಳನ್ನು ತಿದ್ದುತ್ತಾ ವಿದ್ಯಾರ್ಥಿಗಳ ಏಳಿಗೆಯಲ್ಲಿ ಸಂತಸ ಪಡುವ ವೃತ್ತಿ ಶ್ರೇಷ್ಠವಾದುದು ಎಂದರು.

ಸಂಘದ ಉಪಾಧ್ಯಕ್ಷ ಸಂದೇಶ ಶೆಟ್ಟಿ ಪೊಡುಂಬ ಅವರು ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಶುಭ ಹಾರೈಸಿದರು.

ಗೌರವ ಸ್ವೀಕರಿಸಿ ಮಾತನಾಡಿದ ಕೆ. ರವೀಂದ್ರ ನಾಯಕ್, ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ದೊರಕುವಲ್ಲಿ ಶಾಲೆಯ ಸಹೋದ್ಯೋಗಿಗಳು, ಪೋಷಕರು ಹಾಗೂ ಹಳೆ ವಿದ್ಯಾರ್ಥಿಗಳ ಸಹಕಾರ ಮತ್ತು ಪರಿಶ್ರಮ ಪ್ರಮುಖ ಪಾತ್ರ ವಹಿಸಿದೆ. ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು. ಅಲ್ಲದೆ, ಸಂಘದ ಸದಸ್ಯನಾಗಿರುವ ಹಿನ್ನೆಲೆಯಲ್ಲಿ ತನ್ನನ್ನು ಗೌರವಿಸಿದ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಸಮಾಜಮುಖಿ ಸೇವೆಗಳ ಮೂಲಕ ದಕ್ಷಿಣ ಕನ್ನಡ ಜಿಲ್ಲೆಗೆ ಮಾದರಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರಾದ ಸತೀಶ್ ಪೂಜಾರಿ ಅಲಕ್ಕೆ, ದಿನೇಶ್ ಪೂಜಾರಿ, ರಶ್ಮಿತ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ಜಾರಪ್ಪ ನಾಯ್ಕ, ವೀರಪ್ಪ ಪರವ, ವಿಶ್ವನಾಥ ಶೆಟ್ಟಿಗಾರ್, ಎ. ಶಿವ ಗೌಡ, ಕೀರ್ತಿರಾಜ್ (ಎಸ್‌ಸಿಡಿಸಿಸಿ ಬ್ಯಾಂಕ್ ಪ್ರತಿನಿಧಿ), ರಾಜೇಶ್ ಶೆಟ್ಟಿ ಕೊನೆರಬೆಟ್ಟು, ನವೀನ ಹೆಗ್ಡೆ, ಮಂದಾರತಿ ಎಸ್. ಶೆಟ್ಟಿ, ಪುಷ್ಪಲತಾ ಎಸ್.ಆರ್., ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರತಿ ಶೆಟ್ಟಿ ಹಾಗೂ ಸಿಬ್ಬಂದಗಳಾದ ಹೇಮಂತ್ ಸಿದ್ಧಕಟ್ಟೆ, ಪ್ರದೀಪ್ ಆರಂಬೋಡಿ ಉಪಸ್ಥಿತರಿದ್ದರು.

ಸಿಬ್ಬಂದಿ ಸುಭಾಸ್ ಬಂಗೇರ ಕಾರ್ಯಕ್ರಮ ನಿರೂಪಿಸಿ, ಧನ್ಯವಾದ ಅರ್ಪಿಸಿದರು.

Leave a Reply

Your email address will not be published. Required fields are marked *