ಮಂಗಳೂರು: ನಗರವನ್ನು ಮಾದಕ ವಸ್ತು ಮುಕ್ತವಾಗಿಸುವ ಉದ್ದೇಶದಿಂದ ಮಂಗಳೂರು ನಗರ ಪೊಲೀಸ್ ಇಲಾಖೆ ಹಾಗೂ ವಿವಿಧ ಕಾಲೇಜುಗಳ ಆಡಳಿತ ಮಂಡಳಿಗಳ ಸಹಯೋಗದಲ್ಲಿ ನಡೆಯುತ್ತಿರುವ ‘ಡ್ರಗ್ಸ್ ಮುಕ್ತ ಕ್ಯಾಂಪಸ್’ ಅಭಿಯಾನಕ್ಕೆ ಉತ್ತಮ ಸ್ಪಂದನೆ ದೊರೆತಿದೆ. ಮಾದಕ ವಸ್ತು ಸೇವನೆ ಪತ್ತೆಯಾದ ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್ ನೀಡಿದ ಬಳಿಕ ನಡೆಸಿದ ಮರುಪರೀಕ್ಷೆಯಲ್ಲಿ ಶೇ.75ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಸನಮುಕ್ತರಾಗಿರುವುದು ದೃಢಪಟ್ಟಿದೆ.

ನಗರದ 150 ಕಾಲೇಜುಗಳಲ್ಲಿ ಜನವರಿಯಿಂದ ಈವರೆಗೆ ಸುಮಾರು 8,310 ವಿದ್ಯಾರ್ಥಿಗಳನ್ನು ಮಾದಕ ವಸ್ತು ಸೇವನೆ ಕುರಿತು ತಪಾಸಣೆಗೆ ಒಳಪಡಿಸಲಾಗಿತ್ತು. ಈ ಪೈಕಿ 98 ವಿದ್ಯಾರ್ಥಿಗಳಲ್ಲಿ ಡ್ರಗ್ಸ್ ಸೇವನೆ ಪಾಸಿಟಿವ್ ಎಂದು ವರದಿಯಾಗಿತ್ತು.
ಮಾದಕ ವಸ್ತು ಸೇವನೆ ಪತ್ತೆಯಾದ ವಿದ್ಯಾರ್ಥಿಗಳ ವಿರುದ್ಧ ಕೇವಲ ಕಾನೂನು ಕ್ರಮ ಕೈಗೊಳ್ಳುವುದಕ್ಕೆ ಸೀಮಿತವಾಗದೆ, ಅವರ ಭವಿಷ್ಯವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಪೋಷಕರು ಹಾಗೂ ಕಾಲೇಜು ಆಡಳಿತ ಮಂಡಳಿಯ ಸಹಕಾರದೊಂದಿಗೆ ತಜ್ಞರಿಂದ ವಿದ್ಯಾರ್ಥಿಗಳಿಗೆ ನಿರಂತರ ಕೌನ್ಸೆಲಿಂಗ್ ನೀಡಲಾಗಿತ್ತು.

ಮರುಪರೀಕ್ಷೆಯಲ್ಲಿ 38 ವಿದ್ಯಾರ್ಥಿಗಳು ನೆಗೆಟಿವ್
ಕೌನ್ಸೆಲಿಂಗ್‌ನ ಪರಿಣಾಮವನ್ನು ಪರಿಶೀಲಿಸುವ ಉದ್ದೇಶದಿಂದ ಈ ಹಿಂದೆ ಡ್ರಗ್ಸ್ ಸೇವನೆ ಪಾಸಿಟಿವ್ ಬಂದಿದ್ದ 50 ವಿದ್ಯಾರ್ಥಿಗಳನ್ನು ವಿಶೇಷ ಕಾರ್ಯಾಚರಣೆಯ ಮೂಲಕ ಮರುಪರೀಕ್ಷೆಗೆ ಒಳಪಡಿಸಲಾಯಿತು. ಈ ವೇಳೆ 38 ವಿದ್ಯಾರ್ಥಿಗಳ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. ವಿದ್ಯಾರ್ಥಿಗಳು ಮಾದಕ ವಸ್ತು ಸೇವನೆಯನ್ನು ತ್ಯಜಿಸಿರುವುದಾಗಿ ತಿಳಿಸಿದ್ದಾರೆ.

ಉಳಿದ 12 ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ನಿಗಾ ಇರಿಸುವಂತೆ ಪೋಷಕರು ಹಾಗೂ ಕಾಲೇಜು ಆಡಳಿತ ಮಂಡಳಿಗೆ ಸೂಚಿಸಲಾಗಿದ್ದು, ಅವರಿಗೆ ಕೌನ್ಸೆಲಿಂಗ್ ಮುಂದುವರಿಸುವಂತೆ ತಿಳಿಸಲಾಗಿದೆ.
ಈ ಕುರಿತು ಮಾತನಾಡಿದ ಮಂಗಳೂರು ನಗರ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ, ನಗರದ 150 ಕಾಲೇಜುಗಳಲ್ಲಿ ಸುಮಾರು 8,500 ವಿದ್ಯಾರ್ಥಿಗಳನ್ನು ತಪಾಸಣೆ ನಡೆಸಿದ ಸಂದರ್ಭದಲ್ಲಿ 98 ವಿದ್ಯಾರ್ಥಿಗಳಲ್ಲಿ ಡ್ರಗ್ಸ್ ಸೇವನೆ ಪಾಸಿಟಿವ್ ಆಗಿತ್ತು. ಕೌನ್ಸೆಲಿಂಗ್ ಬಳಿಕ ಮೊದಲ ಹಂತದಲ್ಲಿ 50 ವಿದ್ಯಾರ್ಥಿಗಳನ್ನು ಮರುಪರೀಕ್ಷೆ ನಡೆಸಿದಾಗ 38 ಮಂದಿ ನೆಗೆಟಿವ್ ಬಂದಿರುವುದು ಅತ್ಯಂತ ಸಂತಸದ ಹಾಗೂ ಸಮಾಧಾನಕರ ಬೆಳವಣಿಗೆಯಾಗಿದೆ ಎಂದು ಹೇಳಿದರು.

ಕಾಲೇಜು ಆಡಳಿತ ಮಂಡಳಿಗಳು, ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರ ಸಹಕಾರದಿಂದಲೇ ಈ ರೀತಿಯ ಉತ್ತಮ ಫಲಿತಾಂಶ ಸಾಧ್ಯವಾಗಿದೆ. ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ಸಹಕಾರ ದೊರೆತರೆ ನಗರವನ್ನು ಮಾದಕ ವಸ್ತು ಮುಕ್ತವಾಗಿಸುವ ಪ್ರಯತ್ನಕ್ಕೆ ಮತ್ತಷ್ಟು ಬಲ ಸಿಗಲಿದೆ ಎಂದು ಅವರು ಹೇಳಿದರು.


