ಬೆಳ್ತಂಗಡಿ: ಪುಂಜಾಲಕಟ್ಟೆ–ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅಂಗವಾಗಿ ಬೆಳ್ತಂಗಡಿ ನಗರದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಸಂಭವಿಸಿದ ಅವಘಡದಲ್ಲಿ 22 ವರ್ಷದ ಕಾರ್ಮಿಕ ಮೃತಪಟ್ಟ ಘಟನೆ ಗುರುವಾರ ನಡೆದಿದೆ.

ಮೃತರನ್ನು ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಆಲಿ ಅವರ ಪುತ್ರ ಝುಬೈರ್ (22) ಎಂದು ಗುರುತಿಸಲಾಗಿದೆ.
ಬೆಳ್ತಂಗಡಿ ನಗರದ ಮೂರು ಮಾರ್ಗದ ಸಮೀಪದಲ್ಲಿರುವ ಬೆಳ್ತಂಗಡಿ ಮಹಿಳಾ ಗ್ರಾಹಕರ ಸಹಕಾರಿ ಸಂಘಕ್ಕೆ ಸೇರಿದ ಮಳಿಗೆಯ ಕಟ್ಟಡವನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿತ್ತು. ಕಟ್ಟಡದ ಮೇಲ್ಭಾಗದಲ್ಲಿ ರಾಡ್ ಸಹಿತ ಸಿಮೆಂಟ್ ತೆರವುಗೊಳಿಸುವ ಕೆಲಸ ನಡೆಯುತ್ತಿದ್ದ ಸಂದರ್ಭದಲ್ಲಿ, ಮೇಲ್ಭಾಗ ಹಾಗೂ ಕೆಳಭಾಗದಲ್ಲೂ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದರು.

ಈ ವೇಳೆ ಕೆಳಭಾಗದಲ್ಲಿ ಕೆಲಸ ಮಾಡುತ್ತಿದ್ದ ಝುಬೈರ್ ಅವರ ಮೇಲೆ ಕಟ್ಟಡದ ಮೇಲ್ಭಾಗ ಕುಸಿದು ಬಿದ್ದಿದೆ. ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡರು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ, ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ.

ಘಟನೆಗೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



