ಬೆಳ್ತಂಗಡಿ: ಕಸ್ತೂರಿರಂಗನ್ ವರದಿ ಕರಡು ಅಧಿಸೂಚನೆಗೆ ಸಂಬಂಧಿಸಿದಂತೆ ಗ್ರಾಮಸ್ಥರ ಆಕ್ಷೇಪಣೆ ಹಾಗೂ ಸಲಹೆಗಳನ್ನು ದಾಖಲಿಸಲು ಶಿರ್ಲಾಲು ಗ್ರಾಮ ಪಂಚಾಯಿತಿಯಲ್ಲಿ ಸೋಮವಾರ ಆಯೋಜಿಸಿದ್ದ ವಿಶೇಷ ಗ್ರಾಮಸಭೆಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೇರಿದಂತೆ ಅಗತ್ಯ ಇಲಾಖೆಗಳ ಅಧಿಕಾರಿಗಳು ಹಾಜರಾಗದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಸೂಚನೆಯಂತೆ ಕಸ್ತೂರಿರಂಗನ್ ವರದಿ ವ್ಯಾಪ್ತಿಗೆ ಒಳಪಡುವ ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಗ್ರಾಮಸಭೆ ನಡೆಸಲು ಸೂಚಿಸಲಾಗಿತ್ತು. ಅದರಂತೆ ಶಿರ್ಲಾಲು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ಸಭೆ ನಿಗದಿಯಾಗಿತ್ತು. ನೂರಾರು ಗ್ರಾಮಸ್ಥರು ಸಭೆಗೆ ಆಗಮಿಸಿದ್ದರೂ ಮಧ್ಯಾಹ್ನದವರೆಗೂ ಪಿಡಿಓ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಹಾಜರಾಗಿರಲಿಲ್ಲ ಎಂದು ಗ್ರಾಮಸ್ಥರು ಆಕ್ಷೇಪಿಸಿದರು.

ವಿಶೇಷ ಗ್ರಾಮಸಭೆಯನ್ನು ಆಯೋಜಿಸಿದ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಶೀಲಾ ಅವರು ಸಭೆಗೆ ಗೈರುಹಾಜರಾಗಿದ್ದಕ್ಕೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು. ಅರಣ್ಯ, ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಸೇರಿದಂತೆ ಅಗತ್ಯ ಇಲಾಖೆಗಳ ಅಧಿಕಾರಿಗಳೂ ಆರಂಭದಲ್ಲಿ ಸಭೆಗೆ ಹಾಜರಾಗಿರಲಿಲ್ಲ.
ಮಧ್ಯಾಹ್ನ ಸುಮಾರು 1 ಗಂಟೆ ವೇಳೆಗೆ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಮಂಜುನಾಥ್ ಹಾಗೂ ಸಹಾಯಕ ಅರಣ್ಯಾಧಿಕಾರಿ ಹರಿಪ್ರಸಾದ್ ಸ್ಥಳಕ್ಕೆ ಆಗಮಿಸಿದರು. ಈ ವೇಳೆ ಅಧಿಕಾರಿಗಳ ಗೈರುಹಾಜರಿ ಕುರಿತು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು.

ವಿಶೇಷ ಗ್ರಾಮಸಭೆಗೆ ನಿಗದಿಪಡಿಸಿದ್ದ ಪಂಚಾಯಿತಿ ಸಭಾಂಗಣದಲ್ಲಿ ಸಂಜೀವಿನಿ ಒಕ್ಕೂಟದ ಕಾರ್ಯಕ್ರಮ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪಂಚಾಯಿತಿ ಕಚೇರಿ ಎದುರು ಬಿಸಿಲಿನಲ್ಲಿ ಕಾಯುವ ಪರಿಸ್ಥಿತಿ ನಿರ್ಮಾಣವಾಯಿತು. ಬಳಿಕ ಕೆಲವರು ಕಚೇರಿ ಮುಂಭಾಗ ಕುಳಿತು ಆಕ್ರೋಶ ವ್ಯಕ್ತಪಡಿಸಿದರು.

ಅಧಿಕಾರಿಗಳ ಗೈರುಹಾಜರಿ ಕುರಿತು ಮಾಹಿತಿ ಪಡೆದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಮಾತನಾಡಿದರು. ಈ ವೇಳೆ ಆಡಳಿತಾಧಿಕಾರಿಯೊಂದಿಗೆ ಚರ್ಚಿಸಿದ ಅವರು, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗೆ ದೂರವಾಣಿ ಮೂಲಕ ಮಾಹಿತಿ ನೀಡಿ, ವಿಶೇಷ ಗ್ರಾಮಸಭೆ ನಡೆಸುವಲ್ಲಿ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಅಧಿಕಾರಿಗಳ ಗೈರುಹಾಜರಿಯಿಂದಾಗಿ ನಿಗದಿತ ಸಭೆ ನಡೆಯದೆ, ಸೆ.23ರಂದು ಶಿರ್ಲಾಲು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಕಸ್ತೂರಿರಂಗನ್ ವರದಿ ಕುರಿತು ವಿಶೇಷ ಗ್ರಾಮಸಭೆಯನ್ನು ಮರುನಡೆಸಲಾಗುವುದು ಎಂದು ಆಡಳಿತಾಧಿಕಾರಿ ಮಂಜುನಾಥ್ ಪ್ರಕಟಿಸಿದರು.
ಈ ಸಂದರ್ಭದಲ್ಲಿ ಕಸ್ತೂರಿರಂಗನ್ ವಿರೋಧಿ ಹೋರಾಟ ಸಮಿತಿ ಸಹ ಸಂಚಾಲಕರಾದ ಎಂ.ಕೆ. ಪ್ರಸಾದ್ ಶಿರ್ಲಾಲು, ಜಯಾನಂದ ಪಿಲಿಕಲ, ಶೇಖರ್ ಲಾಯಿಲ ಹಾಗೂ ತಾಲೂಕು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಪೂಜಾರಿ ಉಪಸ್ಥಿತರಿದ್ದರು.



