Breaking
22 Sep 2026, Tue

ವಂಚನೆ ಪ್ರಕರಣ: ₹5 ಸಾವಿರ ಲಂಚ ಪಡೆಯುವ ವೇಳೆ ಬಜ್ಪೆ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ

ಮಂಗಳೂರು: ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ₹5 ಸಾವಿರ ಲಂಚ ಸ್ವೀಕರಿಸುವ ವೇಳೆ ಬಜ್ಪೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಬಾಲಕೃಷ್ಣ ಅವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.


ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಪತ್ರಿಕಾ ಪ್ರಕಟಣೆಯ ಪ್ರಕಾರ, ಇತ್ತೀಚೆಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಂದ ವಶಪಡಿಸಿಕೊಂಡಿದ್ದ ಹಣವನ್ನು ಬಿಡುಗಡೆ ಮಾಡಲು ಇನ್ಸ್ಪೆಕ್ಟರ್ ಬಾಲಕೃಷ್ಣ ಅವರು ₹25 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.


ಈ ಪೈಕಿ ಈಗಾಗಲೇ ₹15 ಸಾವಿರವನ್ನು ಮುಂಗಡವಾಗಿ ಪಡೆದಿದ್ದರು ಎಂದು ಆರೋಪಿಸಲಾಗಿದೆ. ಸೆಪ್ಟೆಂಬರ್ 21ರಂದು ದೂರುದಾರರಿಂದ ಹೆಚ್ಚುವರಿಯಾಗಿ ₹5 ಸಾವಿರ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದಾರೆ.


ಲಂಚದ ಬೇಡಿಕೆಗೆ ಸಂಬಂಧಿಸಿದಂತೆ ದೂರು ಸ್ವೀಕರಿಸಿದ ಬಳಿಕ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಆರೋಪಿ ಅಧಿಕಾರಿಯನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *