ಬಂಟ್ವಾಳ: ಮಾಜಿ ಸಚಿವ ಬಿ. ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆಗೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆ ಸ್ವರೂಪದ ಸಂದೇಶ ಪ್ರಕಟಿಸಿದ ಆರೋಪದ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಭಾಕರ ಹೆಗ್ಡೆ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಬಂಟ್ವಾಳ ನಗರ ಮತ್ತು ಗ್ರಾಮಾಂತರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದಾರ್ (62) ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಬಂಟ್ವಾಳ ನಗರ ಠಾಣೆಯಲ್ಲಿ ಅ.ಕ್ರ. 130/2026ರಂತೆ ಬಿಎನ್‌ಎಸ್ ಕಲಂ 351(2) ಮತ್ತು 352ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸೆಪ್ಟೆಂಬರ್ 20ರಂದು ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರು ಕಾರ್ಕಳ ರಾಷ್ಟ್ರೀಯ ಹೆದ್ದಾರಿ 169ರ ಸಾಣೂರು ಶ್ರೀರಾಮ ಮಂದಿರದ ಡಿವೈಡರ್ ಕ್ರಾಸ್ ಬಳಿ ಅಪಘಾತಕ್ಕೀಡಾಗಿತ್ತು. ಘಟನೆಯಲ್ಲಿ ರಮಾನಾಥ ರೈ ಸೇರಿದಂತೆ ಅವರ ಆಪ್ತ ಸಹಾಯಕರು, ಅಂಗರಕ್ಷಕರು ಹಾಗೂ ಕಾರು ಚಾಲಕರು ಗಾಯಗೊಂಡಿದ್ದು, ಮಂಗಳೂರಿನ ಯೆನೆಪೊಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಅಪಘಾತದ ದೃಶ್ಯವನ್ನು ವ್ಯಕ್ತಿಯೊಬ್ಬರು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದರು. ಆ ಪೋಸ್ಟ್‌ಗೆ ಪ್ರಭಾಕರ ಹೆಗ್ಡೆ ಅವರು ಅವಹೇಳನಕಾರಿ ಹಾಗೂ ಬೆದರಿಕೆ ನೀಡುವ ರೀತಿಯ ಸಂದೇಶವನ್ನು ಪ್ರಕಟಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ನಿಂದನಾತ್ಮಕ ಭಾಷೆ ಬಳಸಿ ಬೆದರಿಕೆ ಹಾಕಿರುವ ಆರೋಪದ ಕುರಿತು ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.

ಮಾನ್ಯ ನ್ಯಾಯಾಲಯದ ಡಿಸ್ ನಂ. 845/2026ಕ್ಕೆ ಸಂಬಂಧಿಸಿದಂತೆ ಎಂ.ಪಿ.ಸಿ. 2319ರ ಮೂಲಕ ಬಂದ ದೂರನ್ನು ಸ್ವೀಕರಿಸಿದ ಬಳಿಕ ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.




