ಗ್ರೇಟರ್ ನೋಯ್ಡಾ: ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಚಲಿಸುತ್ತಿದ್ದ ಸ್ಲೀಪರ್ ಬಸ್‌ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ 9 ಮಂದಿ ಸಜೀವ ದಹನಗೊಂಡಿರುವ ಘಟನೆ ನಡೆದಿದೆ.

ಘಟನೆ ವೇಳೆ ಬಸ್‌ನಲ್ಲಿ ಸುಮಾರು 40ರಿಂದ 50 ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದೆ. ಬೆಂಕಿ ವೇಗವಾಗಿ ಇಡೀ ಬಸ್‌ಗೆ ಆವರಿಸಿಕೊಂಡ ಹಿನ್ನೆಲೆಯಲ್ಲಿ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಯಾಗಿದ್ದು, ಪ್ರಾಣ ಉಳಿಸಿಕೊಳ್ಳಲು ಕೆಲವರು ಚಲಿಸುತ್ತಿದ್ದ ಬಸ್‌ನಿಂದಲೇ ಹೊರಕ್ಕೆ ಜಿಗಿದಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಸದ್ಯ ಬಸ್‌ನಲ್ಲಿ ಕೂಲಿಂಗ್ ಕಾರ್ಯಾಚರಣೆ ನಡೆಯುತ್ತಿದ್ದು, ಅದು ಪೂರ್ಣಗೊಂಡ ಬಳಿಕ ಬಸ್‌ನೊಳಗೆ ಪರಿಶೀಲನೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಬಸ್‌ನೊಳಗೆ ಇನ್ನೂ ಕೆಲವರು ಸಿಲುಕಿರುವ ಸಾಧ್ಯತೆಯನ್ನೂ ಪೊಲೀಸರು ವ್ಯಕ್ತಪಡಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗಮನ ಹರಿಸಿದ್ದು, ಮೃತಪಟ್ಟವರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.



