Breaking
26 Sep 2026, Sat

ಕಮ್ಮಾಜೆ ಹಲ್ಲೆ ಪ್ರಕರಣ: ತಲವಾರು, ಕಬ್ಬಿಣದ ರಾಡ್‌ನಿಂದ ದಾಳಿ; ಮೂವರ ಬಂಧನ

ಬಂಟ್ವಾಳ: ತೆಂಕಬೆಳ್ಳೂರು ಗ್ರಾಮದ ಕಮ್ಮಾಜೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ತಲವಾರು ಹಾಗೂ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು ಅಮ್ಮುಂಜೆ ನಿವಾಸಿ ಪ್ರಶಾಂತ್ (38), ತೆಂಕಬೆಳ್ಳೂರು ನಿವಾಸಿ ರಾಮದಾಸ್ (43) ಹಾಗೂ ಬಡಗಬೆಳ್ಳೂರು ನಿವಾಸಿ ಶಂಕರ (45) ಎಂದು ಗುರುತಿಸಲಾಗಿದೆ.

ಸೆ. 20ರಂದು ಸಂಜೆ ತೆಂಕಬೆಳ್ಳೂರು ಗ್ರಾಮದ ಕಮ್ಮಾಜೆಯಲ್ಲಿ ಪ್ರಶಾಂತ್ ಬೆಳ್ಚಾಡ ಎಂಬವರು ಇದ್ದ ವೇಳೆ ಆಟೋರಿಕ್ಷಾದಲ್ಲಿ ಬಂದ ಪರಿಚಯಸ್ಥರಾದ ಪ್ರಶಾಂತ್, ರಾಮದಾಸ್ ಹಾಗೂ ಶಂಕರ ಅವರು ತಲವಾರು ಮತ್ತು ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಹಲ್ಲೆಯಿಂದ ಪ್ರಶಾಂತ್ ಬೆಳ್ಚಾಡ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೇ ವೇಳೆ ಪರಿಚಯಸ್ಥರು ಸ್ಥಳಕ್ಕೆ ಬರುತ್ತಿರುವುದನ್ನು ಗಮನಿಸಿದ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದರು ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ನೀಡಲಾದ ದೂರಿನ ಆಧಾರದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ಶುಕ್ರವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗಳನ್ನು ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

Leave a Reply

Your email address will not be published. Required fields are marked *