ಉಡುಪಿ: ಜಿಲ್ಲೆಯಲ್ಲಿ ಶಸ್ತ್ರಾಸ್ತ್ರ ಬಳಕೆಗೆ ಸಂಬಂಧಿಸಿದ ಪ್ರಕರಣಗಳ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸರು ವಿಶೇಷ ಶಸ್ತ್ರಾಸ್ತ್ರ ತಪಾಸಣಾ ಕಾರ್ಯಾಚರಣೆ ನಡೆಸಿದ್ದು, ಒಟ್ಟು 2,925 ಶಸ್ತ್ರಾಸ್ತ್ರಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ ನಾಲ್ಕು ಶಸ್ತ್ರಾಸ್ತ್ರಗಳಲ್ಲಿ ಅನಧಿಕೃತ ಮಾರ್ಪಾಡು ಮಾಡಿರುವುದು ಪತ್ತೆಯಾಗಿದೆ.

ಕಳೆದ ಒಂದು ತಿಂಗಳಿನಿಂದ ಜಿಲ್ಲಾದ್ಯಂತ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ ಶಸ್ತ್ರಾಸ್ತ್ರ ಹೊಂದಿರುವವರ ಹಿನ್ನೆಲೆ, ಶಸ್ತ್ರಾಸ್ತ್ರಗಳ ಸ್ಥಿತಿ ಹಾಗೂ ಅವುಗಳಲ್ಲಿ ಯಾವುದೇ ಅನಧಿಕೃತ ಮಾರ್ಪಾಡು ಮಾಡಲಾಗಿದೆಯೇ ಎಂಬುದನ್ನು ಪರಿಶೀಲಿಸಲಾಯಿತು. ಈ ವೇಳೆ ಒಟ್ಟು 2,925 ಶಸ್ತ್ರಾಸ್ತ್ರಗಳ ನ್ನು ತಪಾಸಣೆ ನಡೆಸಲಾಗಿದೆ.
ತಪಾಸಣೆ ನಡೆಸಿದ ಶಸ್ತ್ರಾಸ್ತ್ರಗಳ ಪೈಕಿ ಎಸ್‌ಬಿಎಂಎಲ್ 1,759, ಎಸ್‌ಬಿಬಿಎಲ್ 554, ಡಿಬಿಬಿಎಲ್ 318, ಡಿಬಿಎಂಎಲ್ 6, ಪಿಸ್ತೂಲ್ 120, ರಿವಾಲ್ವರ್ 119, ರೈಫಲ್ 30, ಬೋರ್ ಗನ್ 13 ಹಾಗೂ ಎನ್‌ಪಿ ಬೋರ್ 6 ಸೇರಿವೆ.

ತಪಾಸಣೆ ವೇಳೆ ಶಂಕರನಾರಾಯಣ, ಕೋಟ, ಬ್ರಹ್ಮಾವರ ಹಾಗೂ ಕಾರ್ಕಳ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಸ್ತ್ರಾಸ್ತ್ರಗಳಿಗೆ ಅನಧಿಕೃತವಾಗಿ ಮಾರ್ಪಾಡು ಮಾಡಿರುವುದು ಪತ್ತೆಯಾಗಿದೆ. ಈ ಸಂಬಂಧ ನಾಲ್ಕು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದ್ದು, ಆರೋಪಿಗಳ ವಿರುದ್ಧ ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ–1959ರ ಕಲಂ 25ರ ಅಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

ಇದಲ್ಲದೆ, ರೌಡಿ ಶೀಟ್ ಹೊಂದಿರುವ ಹಾಗೂ ಶಸ್ತ್ರಾಸ್ತ್ರ ಪರವಾನಗಿ ಪಡೆದಿರುವ ವ್ಯಕ್ತಿಗಳ ಪ್ರಸ್ತುತ ನಡವಳಿಕೆಯ ಬಗ್ಗೆಯೂ ಪೊಲೀಸರು ವಿಶೇಷ ಪರಿಶೀಲನೆ ನಡೆಸಿದ್ದಾರೆ. ಪರವಾನಗಿ ಪಡೆದ ಬಳಿಕ ಅವರು ಯಾವುದೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗಿದೆ.
ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆಯ ಹಿತದೃಷ್ಟಿಯಿಂದ ಶಸ್ತ್ರಾಸ್ತ್ರಗಳ ಅಕ್ರಮ ಬಳಕೆ ಮತ್ತು ಅನಧಿಕೃತ ಮಾರ್ಪಾಡುಗಳ ವಿರುದ್ಧ ಮುಂದಿನ ದಿನಗಳಲ್ಲಿಯೂ ನಿರಂತರ ನಿಗಾ ವಹಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸರು ತಿಳಿಸಿದ್ದಾರೆ.


