ಬೆಳ್ತಂಗಡಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಮುಸ್ಲಿಂ ಮತದಾರರನ್ನು ಗುರಿಯಾಗಿಸಿಕೊಂಡು ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲು ಆಕ್ಷೇಪಣೆಗಳನ್ನು ಸಲ್ಲಿಸಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ ಶೇಖರ್ ಲಾಯಿಲ ಆರೋಪಿಸಿದ್ದಾರೆ. ಇಂತಹ ಸುಳ್ಳು ಆಕ್ಷೇಪಣೆಗಳನ್ನು ಸಲ್ಲಿಸಿದವರ ವಿರುದ್ಧ ಚುನಾವಣಾ ಆಯೋಗ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಆ.20ರಿಂದ ಸೆ.23ರ ಅವಧಿಯಲ್ಲಿ ಮತದಾರರ ಹೆಸರುಗಳನ್ನು ಕೈಬಿಡುವಂತೆ ಸಲ್ಲಿಸಲಾದ ಆಕ್ಷೇಪಣೆಗಳಲ್ಲಿ ಶೇ.99.26ರಷ್ಟು ಬಿಜೆಪಿ ಶಕ್ತಿ ಕೇಂದ್ರದ ಪದಾಧಿಕಾರಿಗಳು ಹಾಗೂ ಅವರ ಬೆಂಬಲಿತ ಖಾಸಗಿ ವ್ಯಕ್ತಿಗಳಿಂದ ಸಲ್ಲಿಸಲಾಗಿದೆ ಎಂದು ಅಧಿಕೃತ ಅಂಕಿಅಂಶಗಳನ್ನು ಉಲ್ಲೇಖಿಸಿ ಶೇಖರ್ ಲಾಯಿಲ ತಿಳಿಸಿದ್ದಾರೆ. ಬೆಳ್ತಂಗಡಿ ತಾಲೂಕಿನಲ್ಲಿ ಸಲ್ಲಿಕೆಯಾಗಿರುವ ಆಕ್ಷೇಪಣೆಗಳಲ್ಲಿ ಶೇ.90ರಷ್ಟು ಮುಸ್ಲಿಂ ಮತದಾರರನ್ನು ಗುರಿಯಾಗಿಸಿಕೊಂಡಿವೆ ಎಂದು ಅವರು ಆರೋಪಿಸಿದ್ದಾರೆ.

ಅರ್ಹ ಮತದಾರರನ್ನು ಮತದಾನದ ಹಕ್ಕಿನಿಂದ ವಂಚಿಸುವ ಉದ್ದೇಶದಿಂದ ಇಂತಹ ಕ್ರಮ ನಡೆಯುತ್ತಿದೆ ಎಂಬ ಅನುಮಾನ ಮೂಡಿದ್ದು, ಚುನಾವಣಾ ಆಯೋಗ ಈ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಯಾವುದೇ ಅರ್ಹ ನಾಗರಿಕರ ಹೆಸರು ಅನ್ಯಾಯವಾಗಿ ಮತದಾರರ ಪಟ್ಟಿಯಿಂದ ಕೈಬಿಡದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಮತದಾರರ ಪಟ್ಟಿಯ ಪರಿಷ್ಕರಣೆಯ ಪ್ರಕ್ರಿಯೆ ಕುರಿತು ದೇಶದಾದ್ಯಂತ ಆಕ್ಷೇಪಣೆಗಳು ವ್ಯಕ್ತವಾಗುತ್ತಿವೆ ಎಂದು ಹೇಳಿದ ಅವರು, ಅಲ್ಪಸಂಖ್ಯಾತರು ಹಾಗೂ ಪರಿಶಿಷ್ಟ ಜಾತಿ-ಪಂಗಡದ ಮತದಾರರನ್ನು ಚುನಾವಣಾ ಪ್ರಕ್ರಿಯೆಯಿಂದ ಹೊರಗಿಡುವ ಪ್ರಯತ್ನ ನಡೆಯಬಾರದು ಎಂದರು.

ಬೆಳ್ತಂಗಡಿ ತಾಲೂಕಿನಲ್ಲಿ ಬಿಜೆಪಿ ಹಾಗೂ ಸಂಘಪರಿವಾರದವರು ಮುಸ್ಲಿಂ ಮತದಾರರ ಹೆಸರುಗಳನ್ನು ತೆಗೆದುಹಾಕುವ ಉದ್ದೇಶದಿಂದ ಸುಳ್ಳು ಆಕ್ಷೇಪಣೆಗಳನ್ನು ಸಲ್ಲಿಸುತ್ತಿದ್ದಾರೆ ಎಂಬ ಆರೋಪವನ್ನು ಮಾಡಿರುವ ಅವರು, ಇಂತಹ ಕ್ರಮಗಳು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿವೆ ಎಂದು ಬೆಳ್ತಂಗಡಿ ಸಾಮಾಜಿಕ ಹೋರಾಟಗಾರ, ಶೇಖರ್ ಲಾಯಿಲ ತಿಳಿಸಿದ್ದಾರೆ.


