ಮಂಗಳೂರು: ಕೋರಿಯರ್ ಮೂಲಕ ಎಂಡಿಎಂಎ (MDMA) ಮಾದಕವಸ್ತುವನ್ನು ಮಂಗಳೂರಿಗೆ ಸಾಗಿಸಿ, ಮಂಗಳೂರು ನಗರ ಹಾಗೂ ಕೇರಳದ ವಿವಿಧೆಡೆ ಮಾರಾಟ ಮಾಡಲು ರೂಪಿಸಿದ್ದ ಸಂಚನ್ನು ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ₹1.58 ಕೋಟಿ ಮೌಲ್ಯದ 1 ಕೆಜಿ 796.96 ಗ್ರಾಂ ಎಂಡಿಎಂಎ ಸೇರಿದಂತೆ ಒಟ್ಟು ₹1,63,84,000 ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತರನ್ನು ಕಾಸರಗೋಡು ಜಿಲ್ಲೆಯ ಮಂಗಳ್ಪಾಡಿ ಸಮೀಪದ ಬೈದಲಾ ನಿವಾಸಿ ಅಬ್ದುಲ್ ಹಾಪೀಲ್ (25), ಮಂಗಳೂರಿನ ಕೂಳೂರು ಕಸಬಾ ಬೆಂಗ್ರೆಯ ಜಿಯಾವುಲ್ ಹಕ್ (30) ಹಾಗೂ ಮಂಗಳೂರಿನ ಪಾಂಡೇಶ್ವರದ ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದ ಅಲ್ತಾಫ್ (28) ಎಂದು ಗುರುತಿಸಲಾಗಿದೆ.

ಉಳ್ಳಾಲ ತಾಲೂಕಿನ ಕುಂಪಲದ ಡಿಮಾರ್ಟ್ ಸಮೀಪ ಅ. 8ರಂದು ರಾತ್ರಿ 10 ಗಂಟೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು, ಮಾದಕವಸ್ತು ಮಾರಾಟದ ಆರೋಪದಡಿ ಮೂವರನ್ನು ಬಂಧಿಸಿದ್ದಾರೆ.

ವಾಟರ್ ಪ್ಯೂರಿಫೈಯರ್ನಲ್ಲಿ ಮಾದಕವಸ್ತು ಅಡಗಿಸುವ ಸಂಚು
ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಆರೋಪಿಗಳು ಪಂಜಾಬ್ನ ಅಮೃತಸರದಿಂದ ಎಂಡಿಎಂಎ ಖರೀದಿಸಿ, ಅದನ್ನು ವಾಟರ್ ಪ್ಯೂರಿಫೈಯರ್ನ ನೀರು ಸಂಗ್ರಹಿಸುವ ಭಾಗದಲ್ಲಿ ಅಡಗಿಸಿಟ್ಟು ಕೋರಿಯರ್ ಮೂಲಕ ಮಂಗಳೂರಿಗೆ ಕಳುಹಿಸಲು ಯೋಜಿಸಿದ್ದರು. ಬಳಿಕ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಿಗೆ ಪೂರೈಸಿ ಮಾರಾಟ ಮಾಡಲು ಸಂಚು ರೂಪಿಸಿದ್ದರು ಎನ್ನಲಾಗಿದೆ.

ಬಂಧಿತರಿಂದ 1 ಕೆಜಿ 796.96 ಗ್ರಾಂ ಎಂಡಿಎಂಎ, ಮೂರು ಮೊಬೈಲ್ ಫೋನ್ಗಳು, ಸಾಗಾಟಕ್ಕೆ ಬಳಸಿದ್ದ ಮಾರುತಿ ಸುಜುಕಿ ಸ್ವಿಫ್ಟ್ ಕಾರು, ಆಟೊ ರಿಕ್ಷಾ, ಕೋರಿಯರ್ ರಟ್ಟಿನ ಬಾಕ್ಸ್ ಹಾಗೂ ವಾಟರ್ ಪ್ಯೂರಿಫೈಯರ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜಪ್ತಿ ಮಾಡಲಾದ ಸೊತ್ತುಗಳ ಒಟ್ಟು ಮೌಲ್ಯ ₹1.63 ಕೋಟಿ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ಹಿಂದಿನ ಪ್ರಕರಣಗಳ ಬಗ್ಗೆಯೂ ಮಾಹಿತಿ
ಬಂಧಿತ ಅಬ್ದುಲ್ ಹಾಪೀಲ್ ವಿರುದ್ಧ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆಗೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು. ಜಿಯಾವುಲ್ ಹಕ್ ದುಬೈನ ರಸ್ ಅಲ್ ಖೈಮಾದಲ್ಲಿ ಮಾದಕವಸ್ತು ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ ಮೂರು ವರ್ಷಗಳ ಜೈಲು ಶಿಕ್ಷೆ ಅನುಭವಿಸಿ ಭಾರತಕ್ಕೆ ಮರಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ತಾಫ್ ವಿರುದ್ಧವೂ ಈ ಹಿಂದೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆಗೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು.

ಮಾದಕವಸ್ತು ಪೂರೈಕೆ ಜಾಲವನ್ನು ಆರಂಭದಲ್ಲೇ ಪತ್ತೆಹಚ್ಚುವ ಮೂಲಕ ದೊಡ್ಡ ಪ್ರಮಾಣದ ಮಾದಕವಸ್ತು ಮಾರುಕಟ್ಟೆಗೆ ತಲುಪುವುದನ್ನು ತಡೆಯಲಾಗಿದೆ. ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತ ಮೂವರನ್ನು ವಿಚಾರಣೆಗೊಳಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ಪ್ರಕ್ರಿಯೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.


