ಬೆಂಗಳೂರು: ಕ್ಯಾನ್ಸರ್ ಸೇರಿದಂತೆ ವಿವಿಧ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳ ಬೆಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮುಂದಾಗಿದ್ದು, 283 ಔಷಧಿಗಳ ದರ ಇಳಿಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಕ್ಯಾನ್ಸರ್ ಔಷಧಿಗಳ ಬೆಲೆಯನ್ನು ಶೇ. 70ರಷ್ಟು ಕಡಿಮೆ ಮಾಡುವ ಕುರಿತು ಕೇಂದ್ರ ಸರ್ಕಾರ ಸ್ಪಂದಿಸಿರುವ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಔಷಧಿಗಳ ದುಬಾರಿ ಬೆಲೆಯಿಂದ ರೋಗಿಗಳು ಮತ್ತು ಅವರ ಕುಟುಂಬಗಳು ಎದುರಿಸುತ್ತಿರುವ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಕೇಂದ್ರಕ್ಕೆ ಪತ್ರ ಬರೆಯಲಾಗಿತ್ತು. ಇದೀಗ ಅದಕ್ಕೆ ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಹೇಳಿದರು.

ಔಷಧಿಗಳ ಬೆಲೆ ಇಳಿಕೆಗೆ ಸಂಬಂಧಿಸಿದಂತೆ ಅಧಿಕಾರಿಗಳು ನಡೆಸಿದ ಪ್ರಯತ್ನಗಳಿಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ರಾಷ್ಟ್ರಮಟ್ಟದ ಮಾಧ್ಯಮಗಳೂ ಈ ವಿಚಾರವನ್ನು ಮುನ್ನೆಲೆಗೆ ತಂದಿರುವುದು ಗಮನಾರ್ಹವಾಗಿದೆ ಎಂದು ಅವರು ತಿಳಿಸಿದರು.

ಔಷಧಿಗಳ ಗರಿಷ್ಠ ಚಿಲ್ಲರೆ ಮಾರಾಟ ಬೆಲೆ (ಎಂಆರ್‌ಪಿ) ಮಾತ್ರವಲ್ಲದೆ, ಉತ್ಪಾದನಾ ವೆಚ್ಚ ಮತ್ತು ಮಾರಾಟ ವೆಚ್ಚದ ವಿವರಗಳನ್ನೂ ನಮೂದಿಸುವಂತೆ ಸೂಚಿಸಲಾಗಿದೆ. ಔಷಧಿಗಳ ಮಾರಾಟದಲ್ಲಿ ಲಾಭಾಂಶವನ್ನು ಶೇ. 30ರೊಳಗೆ ಮಿತಿಗೊಳಿಸುವ ಕ್ರಮ ಕೈಗೊಂಡರೆ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಖಾದರ್ ಅಭಿಪ್ರಾಯಪಟ್ಟರು.

ಔಷಧಿಗಳ ಬೆಲೆ ನಿಯಂತ್ರಣದಿಂದ ಚಿಕಿತ್ಸೆಗೆ ತಗಲುವ ವೆಚ್ಚ ಕಡಿಮೆಯಾಗಿ ಜನಸಾಮಾನ್ಯರ ಜೇಬಿಗೆ ಬೀಳುವ ಹೊರೆ ತಗ್ಗಲಿದೆ. ರಾಷ್ಟ್ರಮಟ್ಟದಲ್ಲಿ ಈ ಕ್ರಮ ಸಮರ್ಪಕವಾಗಿ ಅನುಷ್ಠಾನಗೊಂಡರೆ ಸಾರ್ವಜನಿಕರಿಗೆ ಸುಮಾರು 2,000 ಕೋಟಿ ರೂಪಾಯಿ ಉಳಿತಾಯವಾಗುವ ನಿರೀಕ್ಷೆಯಿದೆ ಎಂದು ಅವರು ಹೇಳಿದರು.
ಕ್ಯಾನ್ಸರ್ ಮಾತ್ರವಲ್ಲದೆ, ಗಂಭೀರ ಕಾಯಿಲೆಗಳಿಗೆ ಬಳಸುವ ಔಷಧಿಗಳಿಗೂ ಬೆಲೆ ನಿಯಂತ್ರಣ ವ್ಯವಸ್ಥೆ ಜಾರಿಯಾಗಬೇಕು. ವೈದ್ಯಕೀಯ ಉಪಕರಣಗಳು ಮತ್ತು ಇತರ ಚಿಕಿತ್ಸಾ ಸಾಮಗ್ರಿಗಳಿಗೂ ಹೆಚ್ಚಿನ ದರ ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳಿವೆ. ಇವುಗಳ ಮೇಲಿನ ಲಾಭಾಂಶಕ್ಕೂ ಮಿತಿ ವಿಧಿಸಿದರೆ ರೋಗಿಗಳಿಗೆ ಹೆಚ್ಚಿನ ನೆರವು ದೊರೆಯಲಿದೆ ಎಂದು ಯು.ಟಿ. ಖಾದರ್ ತಿಳಿಸಿದರು.



