ಧಾರವಾಡ: ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರೈತ ಸಂಘಟನೆಗಳು ಧಾರವಾಡ ಹೊರವಲಯದ ಯರಿಕೊಪ್ಪ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿವೆ. ಹೆದ್ದಾರಿಗೆ ಪರ್ಯಾಯವಾಗಿ ತೆರೆಯಲಾಗಿದ್ದ ರಸ್ತೆಗಳನ್ನೂ ರೈತರು ಬಂದ್ ಮಾಡಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಮಂಗಳವಾರ (ಅ. 13) ಬೆಳಿಗ್ಗೆ ನಡೆದ ರೈತರ ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡುವ ನಿರ್ಧಾರ ಕೈಗೊಳ್ಳಲಾಗಿತ್ತು. ಅದರಂತೆ ಯರಿಕೊಪ್ಪ ಕ್ರಾಸ್ ಬಳಿ ಬೆಂಗಳೂರು–ಪುಣೆ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ರಸ್ತೆ ತಡೆ ನಡೆಸಿದ ರೈತರು, ಕಬ್ಬಿಗೆ ಶೀಘ್ರ ದರ ನಿಗದಿಪಡಿಸುವಂತೆ ಆಗ್ರಹಿಸಿದರು.

ರೈತ ಮುಖಂಡರನ್ನು ದೆಹಲಿಗೆ ಕರೆಸಿ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಭೂಷಣ್ ಬೋರಸೆ ಭೇಟಿ ನೀಡಿ ರೈತರೊಂದಿಗೆ ಮಾತುಕತೆ ನಡೆಸಿದರು. ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಕೆಎಸ್‌ಆರ್‌ಪಿ ತುಕಡಿ ಹಾಗೂ ಸಿವಿಲ್ ಪೊಲೀಸರನ್ನು ನಿಯೋಜಿಸಲಾಗಿದೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದಾರೆ. ಹೆದ್ದಾರಿಗೆ ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡಿರುವುದನ್ನು ಗಮನಿಸಿದ ರೈತರು, ಆ ಮಾರ್ಗಗಳನ್ನೂ ತಡೆದಿದ್ದಾರೆ.




