ಉಡುಪಿ: ನಿಷೇಧಿತ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಅಕ್ಟೋಬರ್ 17ರ ರಾತ್ರಿ ಅಜ್ಜರಕಾಡಿನ ಭುಜಂಗ ಪಾರ್ಕ್ ಬಳಿ ಬಂಧಿಸಿದ್ದಾರೆ. ಆರೋಪಿಯಿಂದ ಮಾದಕ ವಸ್ತು ಸೇರಿದಂತೆ ಅಂದಾಜು 85 ಸಾವಿರ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತನನ್ನು ಉದ್ಯಾವರದ ಅಂಕುದ್ರು ನಿವಾಸಿ ವಿಜಯ್ ಪೂಜಾರಿ (36) ಎಂದು ಗುರುತಿಸಲಾಗಿದೆ.
ಉಡುಪಿ ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕ ಭರತೇಶ್ ಕಂಕಣವಾಡಿ ಅವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ, ಸ್ಕೂಟರ್‌ನಲ್ಲಿ ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ವಿಜಯ್ ಪೂಜಾರಿಯನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಸ್ಕೂಟರ್‌ನ ಡಿಕ್ಕಿ ಪರಿಶೀಲಿಸಿದಾಗ ಎಂಡಿಎಂಎ ಪತ್ತೆಯಾಗಿದೆ.

ಪೊಲೀಸರು 35 ಸಾವಿರ ರೂ. ಮೌಲ್ಯದ 17.66 ಗ್ರಾಂ ಎಂಡಿಎಂಎ, ತೂಕದ ಯಂತ್ರ, 2.18 ಗ್ರಾಂ ತೂಕದ ಬಿಳಿ ಬಣ್ಣದ ಮಾತ್ರೆಗಳು ಮತ್ತು ಪುಡಿ, ಸ್ಕೂಟರ್ ಹಾಗೂ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ಅಂದಾಜು 85 ಸಾವಿರ ರೂ. ಎಂದು ತಿಳಿದುಬಂದಿದೆ. ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಧಿತ ವಿಜಯ್ ಪೂಜಾರಿ ವಿರುದ್ಧ ಈಗಾಗಲೇ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಮೂರು ಹಾಗೂ ಕಾಪು ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿವೆ. ಈತ ಸೆಪ್ಟೆಂಬರ್ 24ರಂದು ಹಿರಿಯಡ್ಕ ಜೈಲಿನಿಂದ ಬಿಡುಗಡೆಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಉಡುಪಿ ಡಿವೈಎಸ್‌ಪಿ ಬೆಳ್ಳಿಯಪ್ಪ ಅವರ ಮಾರ್ಗದರ್ಶನದಲ್ಲಿ, ಉಡುಪಿ ನಗರ ಪೊಲೀಸ್ ಠಾಣೆಯ ನಿರೀಕ್ಷಕ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಉಪನಿರೀಕ್ಷಕರಾದ ಭರತೇಶ್ ಕಂಕಣವಾಡಿ ಮತ್ತು ರತ್ನಾಕರ್ ಕೆ. ಹಾಗೂ ಪೊಲೀಸ್ ಸಿಬ್ಬಂದಿಗಳಾದ ಜೀವನ್ ಕುಮಾರ್, ಆನಂದ ಗಾಣಿಗ, ಪ್ರಸನ್ನ ಸಿ., ಹೇಮಂತ್ ಮತ್ತು ಒಬಳೇಶ್ ಆನಂದಯ್ಯ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.


