ಬಂಟ್ವಾಳ: ಇರ್ವತ್ತೂರುಪದವು ಶ್ರೀ ಶಾರದೋತ್ಸವ ಸೇವಾ ಸಮಿತಿ, ಶ್ರೀ ಶಾರದ ಸೇವಾ ಟ್ರಸ್ಟ್ ಹಾಗೂ ದಶಮಾನೋತ್ಸವ ಸಮಿತಿಯ ಆಶ್ರಯದಲ್ಲಿ ಮೂಡುಪಡುಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದ ಶ್ರೀ ಶಾರದಾ ಪೂಜಾ ದಶಮಾನೋತ್ಸವ ‘ದಶಾರದ ಸಂಭ್ರಮ-2026’ರ ಧಾರ್ಮಿಕ ಸಭೆಯಲ್ಲಿ ಮೂಡಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ ಆಳ್ವ ಅವರಿಗೆ ‘ಶ್ರೀ ಶಾರದ ತಿಲಕ ಪ್ರಶಸ್ತಿ’ ಪ್ರದಾನ ಮಾಡಲಾಯಿತು.

ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿ ಪ್ರಶಸ್ತಿ ಪ್ರದಾನ ಮಾಡಿ ಆಶೀರ್ವಚನ ನೀಡಿದರು. ಸಮಿತಿಗಳು ಕೇವಲ ಉತ್ಸವಗಳಿಗೆ ಸೀಮಿತವಾಗದೆ, ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ರಚನಾತ್ಮಕ ಹಾಗೂ ಸಮಾಜಮುಖಿ ಚಟುವಟಿಕೆಗಳನ್ನು ನಿರಂತರವಾಗಿ ನಡೆಸುತ್ತಿರುವುದು ಶ್ಲಾಘನೀಯ. ಧಾರ್ಮಿಕ ಜಾಗೃತಿ, ಸಂಸ್ಕಾರ, ಸಂಸ್ಕೃತಿಯ ಬೆಳವಣಿಗೆಯೊಂದಿಗೆ ಕಲೆ, ಸಾಹಿತ್ಯ, ಕ್ರೀಡೆ, ಆರೋಗ್ಯ, ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿಯೂ ತಮ್ಮದೇ ಆದ ಛಾಪು ಮೂಡಿಸಿವೆ ಎಂದರು.
ಪ್ರಶಸ್ತಿ ಸ್ವೀಕರಿಸಿದ ಡಾ. ಮೋಹನ ಆಳ್ವ ಮಾತನಾಡಿ, ಭಾರತೀಯ ಸಂಸ್ಕೃತಿ ಶ್ರೇಷ್ಠವಾದುದು. ನಮ್ಮ ಅನನ್ಯ ಸಾಂಸ್ಕೃತಿಕ, ಆಧ್ಯಾತ್ಮಿಕ ಹಾಗೂ ಸಾಮರಸ್ಯದ ಪರಂಪರೆಯನ್ನು ಉಳಿಸಿ ಬೆಳೆಸಿಕೊಂಡು ಹೋಗುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.

‘ದಶಾರದ’ ಸ್ಮರಣ ಸಂಚಿಕೆ ಬಿಡುಗಡೆ
ಕಾರ್ಯಕ್ರಮದಲ್ಲಿ ಸಾಹಿತಿ ಗೋಪಾಲ ಅಂಚನ್ ಪ್ರಧಾನ ಸಂಪಾದಕತ್ವದ ‘ದಶಾರದ’ ಸ್ಮರಣ ಸಂಚಿಕೆಯನ್ನು ಶ್ರೀ ಗುರುದೇವಾನಂದ ಸ್ವಾಮೀಜಿ ಸಾಂಕೇತಿಕವಾಗಿ ಬಿಡುಗಡೆಗೊಳಿಸಿದರು. ಗೋಲ್ಡನ್ ಬುಕ್ ಆಫ್ ರೆಕಾರ್ಡ್ಸ್ ಸಾಧಕಿ ವಿಷ್ಣು ಪ್ರಿಯಾ ಪೈ ಅವರಿಗೆ ‘ಶ್ರೀ ದಶಾರದ ಪುರಸ್ಕಾರ’ವನ್ನು ಡಾ. ಮೋಹನ ಆಳ್ವ ಪ್ರದಾನ ಮಾಡಿದರು.

ಉದ್ಯಮಿ ಶ್ರೀಪತಿ ಭಟ್ ಮೂಡಬಿದಿರೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಸಂಸದ ಬ್ರಿಜೇಶ್ ಚೌಟ, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಮಾಜಿ ಸಚಿವ ಬಿ. ರಮಾನಾಥ ರೈ, ಡಾ. ದುರ್ಗಾಪ್ರಸಾದ್ ಎಂ.ಆರ್., ದುರ್ಗಾದಾಸ್ ಶೆಟ್ಟಿ ಮಾವಂತೂರು, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಾಲತಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಎಂ. ತುಂಗಪ್ಪ ಬಂಗೇರಾ, ಬಿ. ಪದ್ಮಶೇಖರ ಜೈನ್, ಹರ್ಷ ಸಂಪಿಗೆತ್ತಾಯ, ಉದ್ಯಮಿ ಡಾ. ವರದರಾಜ ಪೈ, ನ್ಯಾಯವಾದಿ ಸುರೇಶ್ ಶೆಟ್ಟಿ ಹಾಗೂ ಎಸ್‌ಡಿಎಂಸಿ ಅಧ್ಯಕ್ಷೆ ಶಾಲಿನಿ ಯತೀಶ್ ಪೂಜಾರಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಶ್ರೀ ಶಾರದ ಸೇವಾ ಟ್ರಸ್ಟ್ ಅಧ್ಯಕ್ಷ ಡಾ. ರಾಮಕೃಷ್ಣ ಎಸ್. ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ದಯಾನಂದ ಎಸ್. ಎರ್ಮೆನಾಡು ವಂದಿಸಿದರು. ಹಿರಿಯ ರಂಗ ಕಲಾವಿದ ಎಚ್.ಕೆ. ನಯನಾಡು ಕಾರ್ಯಕ್ರಮ ನಿರೂಪಿಸಿದರು.
ಶ್ರೀ ಶಾರದೋತ್ಸವ ಸೇವಾ ಸಮಿತಿ ಅಧ್ಯಕ್ಷ ಸುಧೀಂದ್ರ ಶೆಟ್ಟಿ ಎರ್ಮೆನಾಡು, ದಶಮಾನೋತ್ಸವ ಸಮಿತಿ ಅಧ್ಯಕ್ಷ ಸತೀಶ್ ಪೂಜಾರಿ ಬೆನಕ, ಶ್ರೀ ಶಾರದ ಸೇವಾ ಟ್ರಸ್ಟ್ ಕಾರ್ಯಾಧ್ಯಕ್ಷ ಹರೀಂದ್ರ ಪೈ, ನಿರ್ದೇಶಕ ಮೋಹನ್ ಶೆಟ್ಟಿ ನರ್ವಲ್ದಡ್ಡ, ಉಪಾಧ್ಯಕ್ಷ ಶೇಖರ ಪೂಜಾರಿ ಅಗಲ್ದೋಡಿ, ದಶಮಾನೋತ್ಸವ ಸಮಿತಿ ಸಂಚಾಲಕ ಶಂಕರ ಶೆಟ್ಟಿ ಬೆದ್ರಮಾರು, ಸಾಂಸ್ಕೃತಿಕ ಸಮಿತಿ ಸಂಚಾಲಕ ಗೋಪಾಲ ಅಂಚನ್ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು
ಬೆಳಿಗ್ಗೆ ಶ್ರೀ ಶಾರದಾ ದೇವಿಯ ಪ್ರತಿಷ್ಠೆ ಹಾಗೂ ವಿವಿಧ ಭಜನಾ ತಂಡಗಳಿಂದ ಭಜನೆ ನಡೆಯಿತು. ಮಧ್ಯಾಹ್ನ ಮಹಾಪೂಜೆ, ಭಕ್ತಿ ರಸಮಂಜರಿ ಮತ್ತು ಅನ್ನಸಂತರ್ಪಣೆ ನೆರವೇರಿದವು. ಬಳಿಕ ‘ತೆಲಿಕೆದ ಗೊಂಚಿಲ್’ ಹಾಸ್ಯ ಕಾರ್ಯಕ್ರಮ, ನೃತ್ಯ ವೈಭವ, ಭರತನಾಟ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಗಮನ ಸೆಳೆದವು. ರಾತ್ರಿ ತುಳು ನಾಟಕ ಪ್ರದರ್ಶನಗೊಂಡಿತು.



