ಬೆಳ್ತಂಗಡಿ: ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಅಕ್ಟೋಬರ್ 17ರಂದು ನಡೆದ 17ರ ವಯೋಮಾನದ ರಾಜ್ಯಮಟ್ಟದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಪಡೆದ ಬೆಳ್ತಂಗಡಿ ತಾಲೂಕಿನ ಇಬ್ಬರು ವಿದ್ಯಾರ್ಥಿನಿಯರು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬಂದಾರು ಗ್ರಾಮದ ಪಾಣೆಕಲ್ಲು ನಿವಾಸಿ ಶಿವಪ್ಪ ಮತ್ತು ಸುಮಿತ್ರಾ ದಂಪತಿಯ ಪುತ್ರಿ ಕು. ಕೀರ್ತಿಕಾ ಹಾಗೂ ಮೊಗ್ರು ಗ್ರಾಮದ ಪರಕ್ಕಾಜೆ ನಿವಾಸಿ ರಾಮಣ್ಣ ಗೌಡ ಮತ್ತು ನೀಲಾವತಿ ದಂಪತಿಯ ಪುತ್ರಿ ಕು. ಯಶ್ಮಿತಾ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಯರು.

ಇವರಿಬ್ಬರೂ ಬಂದಾರು ಪ್ರಾಥಮಿಕ ಶಾಲೆಯಲ್ಲಿ 8ನೇ ತರಗತಿಯವರೆಗೆ ವಿದ್ಯಾಭ್ಯಾಸ ಪೂರ್ಣಗೊಳಿಸಿ, ಪ್ರಸ್ತುತ ಮುಂಡಾಜೆ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಬಾಲ್ಯದಿಂದಲೇ ವಾಲಿಬಾಲ್ನಲ್ಲಿ ಆಸಕ್ತಿ ಹೊಂದಿರುವ ಇವರು ಹಲವಾರು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ರಾಜ್ಯಮಟ್ಟದ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿರುವ ಈ ವಿದ್ಯಾರ್ಥಿನಿಯರು, ಡಿಸೆಂಬರ್ನಲ್ಲಿ ರಾಜಸ್ಥಾನದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಪಂದ್ಯಾಟದಲ್ಲಿ ಭಾಗವಹಿಸಲಿದ್ದಾರೆ.

ವಿದ್ಯಾರ್ಥಿನಿಯರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು, ತಾಲೂಕಿನ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸಿ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಯಶಸ್ಸು ಸಾಧಿಸುವಂತೆ ಶುಭ ಹಾರೈಸಿದರು. ಬಂದಾರು ಹಾಗೂ ಮೊಗ್ರು ಗ್ರಾಮದ ಗ್ರಾಮಸ್ಥರೂ ವಿದ್ಯಾರ್ಥಿನಿಯರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದ್ದಾರೆ.



