ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಸಾರಿಗೆ ಬಸ್ವೊಂದು ನಿಯಂತ್ರಣ ತಪ್ಪಿ ಸುಮಾರು 100 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬುಧವಾರ ಬೆಳಗ್ಗೆ ಈ ಭೀಕರ ಅಪಘಾತ ಸಂಭವಿಸಿದೆ.
ಪೆಚೌಂಡ್ನಿಂದ ರಾಮನಗರಕ್ಕೆ ತೆರಳುತ್ತಿದ್ದ ಬಸ್, ಬೆಳಗ್ಗೆ ಸುಮಾರು 8 ಗಂಟೆಯ ವೇಳೆಗೆ ಬಸಂತ್ಗಢ ತಹಸಿಲ್ನ ಗುಲ್ಲಿ ಗಾಲಾ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತದ ತೀವ್ರತೆಗೆ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ತುರ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ. ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ (ಎಸ್ಡಿಎಂ) ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಪಘಾತದಲ್ಲಿ ಗಾಯಗೊಂಡವರನ್ನು ಬಸಂತ್ಗಢದ ಸಾರ್ವಜನಿಕ ಆರೋಗ್ಯ ಕೇಂದ್ರ (ಪಿಎಚ್ಸಿ) ಹಾಗೂ ರಾಮನಗರದ ಉಪಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಒಂದು ವಾರದಲ್ಲಿ ಎರಡನೇ ಅಪಘಾತ
ಉಧಂಪುರ ಜಿಲ್ಲೆಯಲ್ಲಿ ಒಂದು ವಾರದ ಅವಧಿಯಲ್ಲಿ ಸಂಭವಿಸಿದ ಎರಡನೇ ಬಸ್ ಅಪಘಾತ ಇದಾಗಿದೆ. ಅಕ್ಟೋಬರ್ 15ರಂದು ಜಾನು ಪ್ರದೇಶದಲ್ಲಿ ಮಿನಿ ಬಸ್ವೊಂದು ರಸ್ತೆಯಿಂದ ಜಾರಿ ಕಂದಕಕ್ಕೆ ಬಿದ್ದ ಪರಿಣಾಮ 18 ಮಂದಿ ಗಾಯಗೊಂಡಿದ್ದರು. ಆ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿರಲಿಲ್ಲ.



