ಉಡುಪಿ: ಸೈಕಲ್‌ನಲ್ಲಿ ರಸ್ತೆ ದಾಟುತ್ತಿದ್ದ ಹಿರಿಯ ಆರ್‌ಎಸ್‌ಎಸ್ ಮುಖಂಡರೊಬ್ಬರಿಗೆ ಕಾರು ಡಿಕ್ಕಿಯಾಗಿ ಮೃತಪಟ್ಟ ದಾರುಣ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಜಂಕ್ಷನ್ ಬಳಿ ಅ. 26ರಂದು ಮುಂಜಾನೆ ನಡೆದಿದೆ.
ಮೃತರನ್ನು ಕೋಟದ ಮಣೂರು ನಿವಾಸಿ ಗುರುದಾಸ್ ಶೆಣೈ (65) ಎಂದು ಗುರುತಿಸಲಾಗಿದೆ.

ಅ. 26ರಂದು ಮುಂಜಾನೆ ಕೋಟ ಜಂಕ್ಷನ್ ಬಳಿ ಗುರುದಾಸ್ ಶೆಣೈ ಅವರು ಸೈಕಲ್‌ನಲ್ಲಿ ರಸ್ತೆ ದಾಟುತ್ತಿದ್ದಾಗ, ಉಡುಪಿ ಕಡೆಯಿಂದ ಕುಂದಾಪುರದತ್ತ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಅವರು ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಳಿಕ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರು ಚಾಲಕ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಕಾರು ಚಾಲಕನನ್ನು ಕೋಟೇಶ್ವರದ ಬೀಜಾಡಿ ನಿವಾಸಿ ಪ್ರದೀಪ್ ಕಾಂಚನ್ ಎಂದು ಗುರುತಿಸಲಾಗಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಆಂಬುಲೆನ್ಸ್ ಮೂಲಕ ಅವರನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ.

ಘಟನಾ ಸ್ಥಳಕ್ಕೆ ಕೋಟ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.




