Breaking
28 Oct 2026, Wed

ಪದವೀಧರ, ಶಿಕ್ಷಕರ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಹಿನ್ನಲೆ 2028 ರಲ್ಲಿ ಮತ್ತೆ ರಾಜ್ಯದಲ್ಲಿ ಬಿಜೆಪಿ ಸರಕಾರ: ಪ್ರಭಾಕರ ಪ್ರಭು

ಬಂಟ್ವಾಳ: ಪದವೀಧರ ಹಾಗೂ ಶಿಕ್ಷಕರ ವಿಧಾನ ಪರಿಷತ್ ಚುನಾವಣೆ ಫಲಿತಾಂಶವು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಆಡಳಿತ ವಿರೋಧಿ ಮತ್ತು ಜನಪರ ವಿರೋಧಿ ನೀತಿಗಳಿಗೆ ಮತದಾರರು ನೀಡಿದ ಉತ್ತರವಾಗಿದೆ. 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 140ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಬಂಟ್ವಾಳ ಬಿಜೆಪಿ ಮುಖಂಡ ಪ್ರಭಾಕರ ಪ್ರಭು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರಜ್ಞಾವಂತ ಶಿಕ್ಷಕರು ಹಾಗೂ ಪದವೀಧರರು ಬ್ಯಾಲೆಟ್ ಪೇಪರ್ ಮೂಲಕ ತಮ್ಮ ಹಕ್ಕನ್ನು ಚಲಾಯಿಸಿ, ಬಿಜೆಪಿ ಅಧಿಕೃತ ಅಭ್ಯರ್ಥಿಗಳಿಗೆ ಬೆಂಬಲ ನೀಡುವ ಮೂಲಕ ಕಾಂಗ್ರೆಸ್ ಸರ್ಕಾರದ ಆಡಳಿತದ ಬಗ್ಗೆ ತಮ್ಮ ಅಭಿಪ್ರಾಯವನ್ನು ಸ್ಪಷ್ಟಪಡಿಸಿದ್ದಾರೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಗ್ಯಾರಂಟಿ ಯೋಜನೆಗಳನ್ನು ಹೊರತುಪಡಿಸಿ ಜನಸಾಮಾನ್ಯರಿಗೆ ಹಲವು ಸಮಸ್ಯೆಗಳು ಎದುರಾಗಿವೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಂಧ್ಯಾ ಸುರಕ್ಷಾ ಯೋಜನೆಯಡಿ ಒಂದೇ ಕುಟುಂಬದ 65 ವರ್ಷ ಮೇಲ್ಪಟ್ಟ ಇಬ್ಬರು ಅಥವಾ ಮೂವರು ಅರ್ಹರಿಗೆ ಪಿಂಚಣಿ ದೊರೆಯುತ್ತಿತ್ತು. ಆದರೆ, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಡಿ ಕುಟುಂಬದ ಒಬ್ಬರಿಗೆ ಮಾತ್ರ ₹2,000 ನೀಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಬಡವರಿಗೆ ವಸತಿ ಸೌಲಭ್ಯ ಕಲ್ಪಿಸುವಲ್ಲಿ ಸರ್ಕಾರ ವಿಫಲವಾಗಿದೆ. ಕುಮ್ಕಿ ಜಮೀನಿನಲ್ಲಿ ಮನೆ ನಿರ್ಮಿಸಿಕೊಂಡವರಿಗೆ ಮನೆ ನಂಬರ್ ಹಾಗೂ ವಿದ್ಯುತ್ ಸಂಪರ್ಕ ಪಡೆಯುವಲ್ಲಿ ಸಮಸ್ಯೆಗಳಿವೆ. ಗ್ಯಾರಂಟಿ ಯೋಜನೆಗಳ ಭರವಸೆ ನೀಡಿ, ಹಿಂದಿನ ಬಿಜೆಪಿ ಸರ್ಕಾರದ ಕೆಲವು ಜನಪರ ಯೋಜನೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಪ್ರಭಾಕರ ಪ್ರಭು ಟೀಕಿಸಿದ್ದಾರೆ.

ಕಳೆದ ಮೂರು ವರ್ಷಗಳಿಂದ ಜನರ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸದ ಕಾಂಗ್ರೆಸ್ ಸರ್ಕಾರವನ್ನು ಮುಂಬರುವ ಚುನಾವಣೆಯಲ್ಲಿ ಜನರು ತಿರಸ್ಕರಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ದೇಶದ ಅಭಿವೃದ್ಧಿಗೆ ಮತ್ತಷ್ಟು ಬಲ ನೀಡಲು ಕರ್ನಾಟಕದ ಮತದಾರರು ಬಿಜೆಪಿ ಪರವಾಗಿ ನಿಲ್ಲಬೇಕು ಎಂದು ಮನವಿ ಮಾಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 140ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *