ಮಂಗಳೂರು: ಮಂಗಳೂರು ಸಮೀಪದ ಕಣ್ಣೂರು ಬಳಿ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಅನಿಲ ಸಿಲಿಂಡರ್ಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಶುಕ್ರವಾರ ತಡರಾತ್ರಿ ಪಲ್ಟಿಯಾದ ಪರಿಣಾಮ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಮಂಗಳೂರಿನಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಲಾರಿ, ಕಣ್ಣೂರಿನ ಮಸೀದಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗಡ್ಡಲಾಗಿ ಪಲ್ಟಿಯಾಗಿದೆ. ಪರಿಣಾಮವಾಗಿ ಹೆದ್ದಾರಿಯಲ್ಲಿ ಎರಡೂ ಬದಿಗಳಲ್ಲಿ ಕಿಲೋಮೀಟರ್ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದು, ತೀವ್ರ ಸಂಚಾರ ದಟ್ಟಣೆ ಉಂಟಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಅನಿಲ ಸಿಲಿಂಡರ್ಗಳಿಂದ ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ.

ಇನ್ನು ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಮಂಗಳೂರು ಸಂಚಾರ ಪೊಲೀಸರು ಪರ್ಯಾಯ ಮಾರ್ಗಗಳ ಮೂಲಕ ವಾಹನಗಳ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದು, ವಾಹನ ಸಂಚಾರ ಸುಗಮಗೊಳಿಸಲು ಕ್ರಮ ಕೈಗೊಂಡಿದ್ದಾರೆ.




