Breaking
7 Nov 2026, Sat

ಯಾದಗಿರಿ: ನಿರ್ಮಾಣ ಹಂತದ ಸೇತುವೆಗೆ ಕಾರು ಡಿಕ್ಕಿ – ನಾಲ್ವರು ಯುವಕರ ದಾರುಣ ಸಾವು

ಯಾದಗಿರಿ: ತುಳಜಾಪುರಕ್ಕೆ ತೆರಳಿ ವಾಪಸ್ ಬರುತ್ತಿದ್ದ ನಾಲ್ವರು ಯುವಕರು ಭೀಕರ ರಸ್ತೆ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಇಬ್ರಾಹಿಂಪುರ ಗ್ರಾಮದ ಸಮೀಪ ಶುಕ್ರವಾರ (ನ.6) ತಡರಾತ್ರಿ ಸಂಭವಿಸಿದೆ.

ಇಬ್ರಾಹಿಂಪುರ ಗ್ರಾಮದ ಬಳಿಯ ಡಿಬಿಎಲ್ ಕ್ಯಾಂಪ್ ಸಮೀಪ ಸೂರತ್ – ಚೆನ್ನೈ ರಾಷ್ಟ್ರೀಯ ಹೆದ್ದಾರಿಯ ಸಿಕ್ಸ್ಲೇನ್ ರಸ್ತೆಯಲ್ಲಿ ರಾತ್ರಿ ಸುಮಾರು 11ರಿಂದ 11.30ರ ನಡುವೆ ಈ ಅಪಘಾತ ನಡೆದಿದೆ. ಕೆಎ-34 ಎನ್-6622 ನೋಂದಣಿ ಸಂಖ್ಯೆಯ ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು. ಈ ವೇಳೆ ಅತಿವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ನಿರ್ಮಾಣ ಹಂತದಲ್ಲಿದ್ದ ಸೇತುವೆಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಅದರಲ್ಲಿದ್ದ ನಾಲ್ವರೂ ಗಂಭೀರವಾಗಿ ಗಾಯಗೊಂಡಿದ್ದರು.

ಅಪಘಾತದಲ್ಲಿ ಕಾರು ಚಾಲಕ ಗುರುರಾಜ್ ಸುರೇಶ ಚವ್ಹಾಣ (29) ಹಾಗೂ ಮುಂಭಾಗದ ಸೀಟಿನಲ್ಲಿದ್ದ ರೆಡ್ಡಿ ಬಾಮ್ಲಾ ರಾಠೋಡ (33) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಿಂಬದಿಯ ಸೀಟಿನಲ್ಲಿ ಪ್ರಯಾಣಿಸುತ್ತಿದ್ದ ಗೋವಿಂದ ಸೀತ್ಯಾ ಚವ್ಹಾಣ (28) ಮತ್ತು ಕುಮಾರ ರಾಮು ರಾಠೋಡ (26) ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ತಕ್ಷಣ ಆಂಬ್ಯುಲೆನ್ಸ್ ಮೂಲಕ ಯಾದಗಿರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ 1.20ರ ಸುಮಾರಿಗೆ ಇಬ್ಬರೂ ಮೃತಪಟ್ಟಿದ್ದಾರೆ.

ಮೃತ ನಾಲ್ವರೂ ಲಂಬಾಣಿ ಸಮುದಾಯಕ್ಕೆ ಸೇರಿದವರಾಗಿದ್ದು, ಯಾದಗಿರಿ ತಾಲೂಕಿನ ವಿವಿಧ ತಾಂಡಾಗಳ ನಿವಾಸಿಗಳಾಗಿದ್ದಾರೆ. ಒಂದೇ ಅಪಘಾತದಲ್ಲಿ ನಾಲ್ವರು ಯುವಕರು ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ಶೋಕದ ಛಾಯೆ ಆವರಿಸಿದೆ. ಮೃತರ ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿದ್ದು, ತಾಂಡಾಗಳಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.

ಕಾರು ಚಾಲಕ ಗುರುರಾಜ್ ಅತಿವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿದ್ದರಿಂದ ನಿಯಂತ್ರಣ ತಪ್ಪಿ ನಿರ್ಮಾಣ ಹಂತದ ಸೇತುವೆಗೆ ಡಿಕ್ಕಿ ಹೊಡೆದಿದೆ ಎಂದು ಮೃತ ರೆಡ್ಡಿ ಅವರ ಸಹೋದರ ಮಂಗ್ಯಾ ಬಾಮ್ಲಾ ರಾಠೋಡ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.

ಈ ಸಂಬಂಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಕಲಂ 281 ಹಾಗೂ 106(1)ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *