ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ.) ವತಿಯಿಂದ ನಡೆಸಲ್ಪಡುತ್ತಿರುವ ಎಲ್.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯ ಪೂರ್ವ ಪ್ರಾಥಮಿಕ ಹಾಗೂ ಕಿರಿಯ ಪ್ರಾಥಮಿಕ ವಿಭಾಗದ ಮಕ್ಕಳ ಹೂವುಗಳ ದಿನಾಚರಣೆಯನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.

ಪ್ರಕೃತಿಯ ಸುಂದರ ಕೊಡುಗೆಯಾದ ಹೂವುಗಳ ಮಹತ್ವವನ್ನು ಮಕ್ಕಳಿಗೆ ಪರಿಚಯಿಸುವುದರ ಜೊತೆಗೆ, ಅವರಲ್ಲಿ ಪ್ರಕೃತಿಯ ಬಗ್ಗೆ ಪ್ರೀತಿ ಹಾಗೂ ಗೌರವವನ್ನು ಬೆಳೆಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಪುಟಾಣಿ ಮಕ್ಕಳು ವಿವಿಧ ಬಣ್ಣಗಳ ಸುಂದರ ಹೂವುಗಳ ವೇಷಭೂಷಣಗಳನ್ನು ಧರಿಸಿ ಎಲ್ಲರ ಗಮನ ಸೆಳೆದರು. ಮಕ್ಕಳ ಹಾಡು, ನೃತ್ಯ, ಭಾಷಣ ಸೇರಿದಂತೆ ವಿವಿಧ ಮನರಂಜನಾ ಚಟುವಟಿಕೆಗಳು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿದವು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಲಾ ಸಂಯೋಜಕ ಯಶವಂತ್ ಜಿ. ನಾಯಕ್, “ಹೂವುಗಳಂತೆ ಮಕ್ಕಳೂ ಸದಾ ನಗು, ಪ್ರೀತಿ ಹಾಗೂ ಉತ್ತಮ ಗುಣಗಳನ್ನು ಬೆಳೆಸಿಕೊಳ್ಳಬೇಕು. ಇಂತಹ ಸುಂದರ ಕಾರ್ಯಕ್ರಮವನ್ನು ಆಯೋಜಿಸಿದ ಎಲ್ಲಾ ಶಿಕ್ಷಕ ವೃಂದದ ಕಾರ್ಯ ಶ್ಲಾಘನೀಯ” ಎಂದು ತಿಳಿಸಿ ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ವಿಜಯ ಕೆ., ಸಂಯೋಜಕ ಯಶವಂತ್ ಜಿ. ನಾಯಕ್ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಭವ್ಯ ಉಪಸ್ಥಿತರಿದ್ದರು.

ಶಾಲಾ ಸಹಶಿಕ್ಷಕಿ ಲಾವಣ್ಯ ಕಾರ್ಯಕ್ರಮ ನಿರೂಪಿಸಿ, ಚೈತ್ರ ಶ್ರೀ ವಂದಿಸಿದರು.
ಮಕ್ಕಳಲ್ಲಿ ಪ್ರಕೃತಿ ಪ್ರೇಮ, ಸೃಜನಶೀಲತೆ ಹಾಗೂ ಆತ್ಮವಿಶ್ವಾಸವನ್ನು ಬೆಳೆಸುವಲ್ಲಿ ಈ ಕಾರ್ಯಕ್ರಮ ಸಹಕಾರಿಯಾಯಿತು. ಶಿಕ್ಷಕಿಯರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.





