ಕಕ್ಯಪದವು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ), ಸಜೀಪ ಮೂಡ ಇವರ ಸಹಯೋಗದಲ್ಲಿ ನವೆಂಬರ್ 7ರಂದು ಸಜೀಪ ಮೂಡದಲ್ಲಿ ನಡೆದ ಬಂಟ್ವಾಳ ತಾಲೂಕು ಮಟ್ಟದ 17ರ ವಯೋಮಾನದ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಕಕ್ಯಪದವಿನ ಎಲ್.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯ ಎರಡೂ ತಂಡಗಳು ಪ್ರಥಮ ಸ್ಥಾನ ಪಡೆದು ಅವಳಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿವೆ.

ಅತ್ಯುತ್ತಮ ಆಟದ ಪ್ರದರ್ಶನ ನೀಡಿದ ಬಾಲಕ ಮತ್ತು ಬಾಲಕಿಯರ ತಂಡಗಳು ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿವೆ.

ವೈಯಕ್ತಿಕ ವಿಭಾಗದಲ್ಲಿಯೂ ವಿದ್ಯಾರ್ಥಿಗಳು ಸಾಧನೆ ಮೆರೆದಿದ್ದು, 9ನೇ ತರಗತಿಯ ಅಧೀಶ್ ಅವರು ಅತ್ಯುತ್ತಮ ರಿಸೀವರ್ (Best Receiver) ಪ್ರಶಸ್ತಿ ಹಾಗೂ 10ನೇ ತರಗತಿಯ ಜನನಿ ಅವರು ಅತ್ಯುತ್ತಮ ಸರ್ವರ್ (Best Server) ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಸಂಯೋಜಕರು, ಮುಖ್ಯ ಶಿಕ್ಷಕಿ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ. ಜಿಲ್ಲಾ ಮಟ್ಟದ ಪಂದ್ಯಾಟದಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಸಂಸ್ಥೆಗೆ ಮತ್ತಷ್ಟು ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ.
ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಹರಿಣಾಕ್ಷಿ ಜಿ.ಕೆ. ಹಾಗೂ ಪೃಥ್ವಿರಾಜ್ ಅವರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು.




