ಮೈಸೂರು: ರಂಗ ಚಂದ್ರಮ ತಂಡದ ವತಿಯಿಂದ ನಿರ್ಮಾಣಗೊಂಡಿರುವ ‘ಅಪಾರ್ಟ್‌ಮೆಂಟ್’ ಕಿರುಚಿತ್ರವನ್ನು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಅವರು ಬಿಡುಗಡೆಗೊಳಿಸಿ ಚಿತ್ರತಂಡದ ಕಲಾತ್ಮಕ ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೊಸಮುಖ ಪ್ರತಿಷ್ಠಾನದ ಯೂಟ್ಯೂಬ್ ಚಾನೆಲ್‌ನಲ್ಲಿ ಕಿರುಚಿತ್ರವನ್ನು ಬಿಡುಗಡೆ ಮಾಡಲಾಯಿತು. ಈ ವೇಳೆ ಕಿರುಚಿತ್ರ ವೀಕ್ಷಿಸಿದ ಶಾಸಕರು, ಯುವ ಪೀಳಿಗೆ ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತಿರುವುದು ಶ್ಲಾಘನೀಯ ಎಂದರು.

ಇಂತಹ ಸೃಜನಶೀಲ ಪ್ರಯತ್ನಗಳು ಹೊಸ ಪ್ರತಿಭೆಗಳಿಗೆ ಉತ್ತಮ ವೇದಿಕೆಯಾಗಲಿದ್ದು, ಸಾರ್ವಜನಿಕರು ಹಾಗೂ ಕಲಾಭಿಮಾನಿಗಳು ಚಿತ್ರತಂಡಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ರಂಗ ಚಂದ್ರಮ ತಂಡದ ಮುಂದಿನ ಕಲಾ ಪಯಣ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಕಿರುಚಿತ್ರದಲ್ಲಿ ಅಭಿನಯಿಸಿರುವ ಕಲಾವಿದರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದು, ನಿರ್ದೇಶನ, ಛಾಯಾಗ್ರಹಣ, ಸಂಕಲನ ಸೇರಿದಂತೆ ವಿವಿಧ ತಾಂತ್ರಿಕ ವಿಭಾಗಗಳಲ್ಲಿ ತಂಡದ ಸದಸ್ಯರು ಶ್ರಮಿಸಿದ್ದಾರೆ.

ಕಾರ್ಯಕ್ರಮದಲ್ಲಿ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಲಯನ್ಸ್ ಕ್ಲಬ್ ಆಫ್ ಮೈಸೂರು ಎಲೈಟ್ ಸಂಸ್ಥೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದು, ಚಿತ್ರತಂಡಕ್ಕೆ ಶುಭ ಹಾರೈಸಿದರು. ಅಲ್ಲದೆ ಬಂಧುಮಿತ್ರರು, ಸ್ನೇಹಿತರು, ಹಿತೈಷಿಗಳು ಹಾಗೂ ಕಲಾಭಿಮಾನಿಗಳು ಭಾಗವಹಿಸಿ ತಂಡದ ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಹೊಸ ಕಲಾವಿದರಿಗೆ ಅವಕಾಶ ಕಲ್ಪಿಸಿ, ಅವರ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಅಗತ್ಯವಾಗಿದ್ದು, ರಂಗ ಚಂದ್ರಮ ತಂಡದ ಈ ಪ್ರಯತ್ನ ಮತ್ತಷ್ಟು ಹೊಸ ಪ್ರತಿಭೆಗಳಿಗೆ ಪ್ರೇರಣೆಯಾಗಲಿ ಎಂದು ಗಣ್ಯರು ಆಶಯ ವ್ಯಕ್ತಪಡಿಸಿದರು.
‘ಅಪಾರ್ಟ್‌ಮೆಂಟ್’ ಕಿರುಚಿತ್ರವನ್ನು ಹೊಸಮುಖ ಪ್ರತಿಷ್ಠಾನದ ಯೂಟ್ಯೂಬ್ ಚಾನೆಲ್‌ನಲ್ಲಿ ವೀಕ್ಷಿಸಿ ಕಲಾವಿದರ ಪ್ರಯತ್ನಕ್ಕೆ ಪ್ರೋತ್ಸಾಹ ನೀಡುವಂತೆ ಚಿತ್ರತಂಡ ಸಾರ್ವಜನಿಕರು ಹಾಗೂ ಕಲಾಭಿಮಾನಿಗಳಲ್ಲಿ ಮನವಿ ಮಾಡಿದೆ.


