ಬೆಳ್ತಂಗಡಿ: ಇಲ್ಲಿನ ಚರ್ಚ್ ರೋಡ್‌ನಲ್ಲಿ ಗೂಡ್ಸ್ ಟೆಂಪೋ ಹಾಗೂ ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ.
ಮೃತರನ್ನು ನಾವೂರು ನಿವಾಸಿ ಸ್ಕೂಟರ್ ಸವಾರ ಸಂತೋಷ್ (32) ಹಾಗೂ ಕಣಿಯೂರು ಗ್ರಾಮದ ಪಿಲಿಗೂಡು ನಿವಾಸಿ ಬೈಕ್ ಸವಾರ ಮೋಹನ್ (33) ಎಂದು ಗುರುತಿಸಲಾಗಿದೆ.

ಮಂಗಳೂರಿನಿಂದ ಚಿಕ್ಕಮಗಳೂರು ಕಡೆಗೆ ತೆರಳುತ್ತಿದ್ದ ಟಾಟಾ ಗೂಡ್ಸ್ ವಾಹನವು ಗುರುವಾಯನಕೆರೆ ಕಡೆಗೆ ಸಾಗುತ್ತಿದ್ದ ಎರಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಗೂಡ್ಸ್ ವಾಹನದ ಚಾಲಕ ನಿದ್ರೆಯ ಮಂಪರಿನಲ್ಲಿದ್ದ ಕಾರಣ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಮಂಗಳೂರಿನಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ಸಂತೋಷ್ ಅವರು ಅಪಘಾತದ ತೀವ್ರತೆಗೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರು ಸುವರ್ಣ ಪ್ರಿಂಟಿಂಗ್ ಪ್ರೆಸ್‌ನಲ್ಲಿಯೂ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೋಹನ್ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.



