Breaking
12 Nov 2026, Thu

ಪಾಣೆಮಂಗಳೂರು–ನರಿಕೊಂಬು ಸಂಪರ್ಕ ರಸ್ತೆ ಕಾಮಗಾರಿ ಅವ್ಯವಸ್ಥೆ: ಅಧಿಕಾರಿಗಳ ವಿರುದ್ಧ ರಮಾನಾಥ ರೈ ಗರಂ

ಬಂಟ್ವಾಳ: ಪಾಣೆಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿಯ ಸತ್ಯಶ್ರೀ ಗುಡಿ ಎದುರಿನ ಸರ್ವೀಸ್ ರಸ್ತೆಯಿಂದ ನರಿಕೊಂಬು–ಶಂಭೂರು ಗ್ರಾಮಗಳನ್ನು ಸಂಪರ್ಕಿಸುವ ರಸ್ತೆ ಅಭಿವೃದ್ಧಿ ಕಾಮಗಾರಿ ಅವ್ಯವಸ್ಥೆಯಿಂದ ಕೂಡಿದೆ ಎಂದು ಸ್ಥಳೀಯರು ಮಾಜಿ ಸಚಿವ ಬಿ. ರಮಾನಾಥ ರೈ ಅವರಿಗೆ ದೂರು ನೀಡಿದ ಘಟನೆ ಬುಧವಾರ ನಡೆದಿದೆ.

ಸ್ಥಳೀಯರ ದೂರಿನ ಹಿನ್ನೆಲೆಯಲ್ಲಿ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿದ ರಮಾನಾಥ ರೈ ಅವರು ಕಾಮಗಾರಿಯನ್ನು ಪರಿಶೀಲಿಸಿದರು.

ಪಾಣೆಮಂಗಳೂರಿನಿಂದ ನರಿಕೊಂಬು–ಶಂಭೂರು ಗ್ರಾಮಗಳನ್ನು ಸಂಪರ್ಕಿಸುವ ರಸ್ತೆಯನ್ನು ಏಕಾಏಕಿ ಮುಚ್ಚಿ, ಜೆಸಿಬಿ ಮೂಲಕ ಅಗೆದು ಹಾಕಲಾಗಿದೆ. ಇಳಿಜಾರಿನಿಂದ ಕೂಡಿರುವ ಈ ರಸ್ತೆ ತೀರಾ ಕಿರಿದಾಗಿದ್ದು, ರಸ್ತೆಯ ಎತ್ತರವನ್ನು ಕಡಿಮೆಗೊಳಿಸಿ ಅಗಲೀಕರಣ ಮಾಡಬೇಕು. ಪ್ರತಿದಿನ ನೂರಾರು ವಾಹನಗಳು ಸಂಚರಿಸುವ ಈ ರಸ್ತೆಯಲ್ಲಿ ದ್ವಿಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು ಎಂದು ಕೆಡಿಪಿ ಮಾಜಿ ಸದಸ್ಯ ಉಮೇಶ್ ಬೋಳಂತೂರು ಆಗ್ರಹಿಸಿದರು.

ಈಗಾಗಲೇ ವಾಹನ ಸವಾರರು ಪರ್ಯಾಯವಾಗಿ ಬಳಸುತ್ತಿರುವ ಜೈನ ಬಸದಿಯಿಂದ ಅಂಡರ್ಪಾಸ್ ಮೂಲಕ ನರಿಕೊಂಬು ಸರ್ಕಾರಿ ಪ್ರಾಥಮಿಕ ಶಾಲೆಗೆ ಸಂಪರ್ಕ ಕಲ್ಪಿಸುವ ರಸ್ತೆಯೂ ಸಂಪೂರ್ಣ ಹದಗೆಟ್ಟಿದೆ ಎಂದು ಸ್ಥಳೀಯರು ಗಮನಕ್ಕೆ ತಂದರು.

ಈ ಹಿನ್ನೆಲೆಯಲ್ಲಿ ಪರ್ಯಾಯ ರಸ್ತೆಯನ್ನು ಕೂಡಲೇ ದುರಸ್ತಿಗೊಳಿಸಿ ವಾಹನಗಳ ದ್ವಿಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಅವರು ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸೂಚನೆ ನೀಡಿ ಎಚ್ಚರಿಕೆ ನೀಡಿದರು.

ಅಲ್ಲದೆ, ಸ್ಥಳದಲ್ಲಿದ್ದ ತಹಶೀಲ್ದಾರ್ ಜಿ. ಮಂಜುನಾಥ್ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್ ಅವರಿಗೆ ಕಾಮಗಾರಿಯ ಬಗ್ಗೆ ನಿರಂತರ ನಿಗಾ ವಹಿಸಿ, ಸೂಕ್ತ ಮೇಲುಸ್ತುವಾರಿ ನಡೆಸುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಎಸ್. ಗಟ್ಟಿ, ಚಿತ್ತರಂಜನ್ ಶೆಟ್ಟಿ ಬೊಂಡಾಲ, ಆಲ್ಬರ್ಟ್ ಮಿನೇಜಸ್, ಕೃಷ್ಣಪ್ಪ ಪೂಜಾರಿ, ರವೀಂದ್ರ ಸಪಲ್ಯ, ಪ್ರಸಾದ್ ಗಾಣಿಗ, ನಿತ್ಯಾನಂದ ಕುರ್ಚಿಪಲ್ಲ, ಉಮೇಶ್ ನೆಲ್ಲಿಗುಡ್ಡೆ, ನರಸಪ್ಪ ಅಮೀನ್, ಶೈಲೇಶ್ ಪೂಜಾರಿ, ಲೋಕೇಶ್, ಮೋನಪ್ಪ ನಿನ್ನಿಪಡ್ಪು, ಸತೀಶ್ ಶೇಡಿಗುರಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *