Breaking
12 Nov 2026, Thu

ಎಲ್.ಸಿ.ಆರ್ ಇಂಡಿಯನ್ ಶಾಲೆಯಲ್ಲಿ ವಾಮದಪದವು ವಲಯ ಮಟ್ಟದ ಪ್ರತಿಭಾ ಕಾರಂಜಿ

ಕಕ್ಯಪದವು: ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ, ಅವುಗಳಿಗೆ ಸೂಕ್ತ ವೇದಿಕೆ ಕಲ್ಪಿಸುವ ಉದ್ದೇಶದಿಂದ ಆಯೋಜಿಸಲಾದ 2026–27ನೇ ಸಾಲಿನ ವಾಮದಪದವು ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವು ನವೆಂಬರ್ 12ರಂದು ಕಕ್ಯಪದವಿನ ಎಲ್.ಸಿ.ಆರ್ ಇಂಡಿಯನ್ ಶಾಲೆಯ ಆವರಣದಲ್ಲಿ ನಡೆಯಿತು.

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ ಮತ್ತು ವಾಮದಪದವು ವಲಯದ ಆಶ್ರಯದಲ್ಲಿ ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಸಹಯೋಗದೊಂದಿಗೆ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕಿ ಬಬಿತಾ ರೋಹಿನಾಥ್ ವಹಿಸಿದ್ದರು. ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಆಶಾ ನಾಯಕ್, ಕ್ಷೇತ್ರ ಸಮನ್ವಯಾಧಿಕಾರಿ ವಿದ್ಯಾ, ಶಿಕ್ಷಣ ಸಂಯೋಜಕ ರಾಮಾನಂದ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ನಾಗರತ್ನ, ವಿಶೇಷ ಸಂಪನ್ಮೂಲ ವ್ಯಕ್ತಿಗಳಾದ ಸುರೇಖಾ ಮತ್ತು ರವೀಂದ್ರ, ವಾಮದಪದವು ವಲಯದ ಸಮೂಹ ಸಂಪನ್ಮೂಲ ವ್ಯಕ್ತಿ ರವಿಕುಮಾರ್, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಜೋಯಿಲ್ ಲೋಬೊ, ಪ್ರಾಥಮಿಕ ಸಹಶಿಕ್ಷಕರ ಸಂಘದ ಅಧ್ಯಕ್ಷ ಜಯರಾಮ್, ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷ ಸಂದೇಶ್, ಪದವೀಧರ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಶಾಂತ್ ಎನ್., ದೈಹಿಕ ಶಿಕ್ಷಕರ ಸಂಘದ ತಾಲೂಕು ಘಟಕದ ಕಾರ್ಯದರ್ಶಿ ಜನಾರ್ಧನ್ ಹಾಗೂ ಸಂಘದ ಪದಾಧಿಕಾರಿ ಚಿನ್ನಪ್ಪ ಉಪಸ್ಥಿತರಿದ್ದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಆಶಾ ನಾಯಕ್, ಪ್ರತಿಭೆಯು ಮಕ್ಕಳ ಭವಿಷ್ಯಕ್ಕೆ ಭದ್ರವಾದ ಅಡಿಪಾಯವಿದ್ದಂತೆ. ಅದಕ್ಕೆ ಸೂಕ್ತ ಪ್ರೋತ್ಸಾಹ ಮತ್ತು ಮಾರ್ಗದರ್ಶನ ದೊರೆತಾಗ ಮಕ್ಕಳು ಜೀವನದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯ ಎಂದರು.

ಶಿಕ್ಷಣ ಸಂಯೋಜಕ ರಾಮಾನಂದ್ ಮಾತನಾಡಿ, ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ಆತ್ಮವಿಶ್ವಾಸ, ಸೃಜನಶೀಲತೆ ಹಾಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದರು. ಇದೇ ವೇಳೆ ಎಲ್.ಸಿ.ಆರ್ ಇಂಡಿಯನ್ ಶಾಲೆಯ ಶಿಸ್ತು, ಅಚ್ಚುಕಟ್ಟಾದ ವ್ಯವಸ್ಥೆ ಹಾಗೂ ಕಾರ್ಯಕ್ರಮದ ಸುವ್ಯವಸ್ಥಿತ ನಿರ್ವಹಣೆಯನ್ನು ಪ್ರಶಂಸಿಸಿದರು.

ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೊ ಮಾತನಾಡಿ, ಶೈಕ್ಷಣಿಕ ಕಲಿಕೆಯೊಂದಿಗೆ ವಿದ್ಯಾರ್ಥಿಗಳಲ್ಲಿರುವ ವಿವಿಧ ಪ್ರತಿಭೆಗಳನ್ನು ಗುರುತಿಸಿ ಅವುಗಳನ್ನು ಪ್ರದರ್ಶಿಸಲು ಅವಕಾಶ ಕಲ್ಪಿಸುವುದರಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ವಾಮದಪದವು ವಲಯದ ಆರು ಕ್ಲಸ್ಟರ್‌ಗಳ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿ ತಮ್ಮ ಕಲಾತ್ಮಕ, ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಪ್ರತಿಭೆಗಳನ್ನು ಪ್ರದರ್ಶಿಸಿದರು. ವಿದ್ಯಾರ್ಥಿಗಳ ಉತ್ಸಾಹಭರಿತ ಭಾಗವಹಿಸುವಿಕೆ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತು.

ಈ ಸಂದರ್ಭದಲ್ಲಿ ಪ್ರತಿಭಾ ಕಾರಂಜಿ ನಿರ್ವಹಣಾ ತಂಡದ ಸದಸ್ಯರಾದ ಇಮ್ತಿಯಾಜ್, ಮ್ಯಾಗ್ನೆಟ್ ಮಾರ್ಲಿನ್ ಡಿಸೋಜ, ಪುಷ್ಪಲತಾ, ರಮ್ಯಾ, ಮಮತಾ ಕೆ.ಎಸ್., ಮಹೇಶ್ ಕುಮಾರ್ ಹಾಗೂ ಜಯಪ್ರಕಾಶ್ ಉಪಸ್ಥಿತರಿದ್ದರು.

ಸಂಸ್ಥೆಯ ಕಾರ್ಯದರ್ಶಿ ಶಿವಾನಿ ರೋಹಿನಾಥ್, ಸಂಯೋಜಕ ಯಶವಂತ್ ಜಿ. ನಾಯಕ್ ಹಾಗೂ ಮುಖ್ಯೋಪಾಧ್ಯಾಯಿನಿ ವಿಜಯ ಕೆ. ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಆರಂಭದಲ್ಲಿ ಮುಖ್ಯೋಪಾಧ್ಯಾಯಿನಿ ವಿಜಯ ಕೆ. ಸ್ವಾಗತಿಸಿದರು. ಸಹಶಿಕ್ಷಕಿ ತೀರ್ಥಲತಾ ವಂದಿಸಿದರು. ಸಹಶಿಕ್ಷಕಿಯರಾದ ದಿವ್ಯಶ್ರೀ ಮತ್ತು ಸೌಮ್ಯ ಕೆ. ಕಾರ್ಯಕ್ರಮ ನಿರೂಪಿಸಿದರು.

ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ಹಾಗೂ ಸೃಜನಶೀಲತೆಗೆ ವೇದಿಕೆ ಕಲ್ಪಿಸಿದ ವಲಯ ಮಟ್ಟದ ಪ್ರತಿಭಾ ಕಾರಂಜಿ ಯಶಸ್ವಿಯಾಗಿ ಸಂಪನ್ನಗೊಂಡಿತು.

Leave a Reply

Your email address will not be published. Required fields are marked *