ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಸುಮಾರು 15 ಅಡಿ ಆಳದ ಹೊಂಡಕ್ಕೆ ಉರುಳಿಬಿದ್ದ ಘಟನೆ ಗುರುವಾರ ನಸುಕಿನ ಜಾವ ಕಲ್ಮಂಜ ಗ್ರಾಮದ ನಿಡಿಗಲ್ನಲ್ಲಿ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಸಂಭವಿಸಿದೆ. ಕಾರಿನಲ್ಲಿದ್ದ ಆರು ಮಂದಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಐವರಿಗೆ ಗಾಯಗಳಾಗಿವೆ.

ಬೆಳಗಾವಿ ಮೂಲದವರಿಗೆ ಸೇರಿದ ಕಾರು ಚಾರ್ಮಾಡಿಯಿಂದ ಉಜಿರೆ ಕಡೆಗೆ ಪ್ರಯಾಣಿಸುತ್ತಿತ್ತು. ನಿಡಿಗಲ್ ಸಮೀಪಿಸುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಯ ಬಲಭಾಗಕ್ಕೆ ಚಲಿಸಿ, ಪಕ್ಕದಲ್ಲಿದ್ದ ಆಳವಾದ ಹೊಂಡಕ್ಕೆ ಉರುಳಿದೆ. ಕಾರು ತಲೆಕೆಳಗಾಗಿ ಬಿದ್ದ ಪರಿಣಾಮ ಐವರು ಗಾಯಗೊಂಡಿದ್ದು, ಅವರನ್ನು ಸ್ಥಳೀಯರ ನೆರವಿನಿಂದ ಹೊರತೆಗೆದು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಬ್ಯಾರಿಕೇಡ್ ಇಲ್ಲದೆ ಅಪಾಯಕ್ಕೆ ಆಹ್ವಾನ!
ಅಪಘಾತ ಸಂಭವಿಸಿದ ಸ್ಥಳದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ರಸ್ತೆ ಬದಿಯಲ್ಲಿ ಸುಮಾರು 15 ಅಡಿ ಆಳದ ಹೊಂಡವಿದೆ. ಇಂತಹ ಅಪಾಯಕಾರಿ ಪ್ರದೇಶದಲ್ಲಿ ವಾಹನಗಳು ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳುವುದನ್ನು ತಡೆಯಲು ಅಗತ್ಯವಿರುವ ಬ್ಯಾರಿಕೇಡ್ಗಳನ್ನು ಅಳವಡಿಸುವ ಕಾರ್ಯ ಇನ್ನೂ ಪೂರ್ಣಗೊಂಡಿಲ್ಲ.

ಹೆದ್ದಾರಿ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಸಮರ್ಪಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದಿರುವ ಬಗ್ಗೆ ಸ್ಥಳೀಯ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಾಹನ ಸವಾರರ ಸುರಕ್ಷತೆಯನ್ನು ನಿರ್ಲಕ್ಷಿಸುವ ಇಂತಹ ಅವ್ಯವಸ್ಥೆಯೇ ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ಅವರು ದೂರಿದ್ದಾರೆ.
ಘಟನೆ ನಡೆದ ತಕ್ಷಣ ಸ್ಥಳಕ್ಕೆ ಧಾವಿಸಿದ ಸ್ಥಳೀಯರು, ಕಾರಿನಲ್ಲಿದ್ದವರನ್ನು ಹೊರತೆಗೆದು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು. ಆಳವಾದ ಹೊಂಡಕ್ಕೆ ಕಾರು ಉರುಳಿಬಿದ್ದರೂ ಆರು ಮಂದಿಯೂ ಪ್ರಾಣಾಪಾಯದಿಂದ ಪಾರಾಗಿರುವುದು ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.



