Breaking
13 Nov 2026, Fri

ಮಕ್ಕಳ ಪ್ರತಿಭೆ ಗುರುತಿಸಿ ಬೆಳೆಸುವಲ್ಲಿ ಪೋಷಕರು, ಶಿಕ್ಷಕರ ಪಾತ್ರ ಮಹತ್ವದ್ದು: ಡಾ. ಗಾಯತ್ರಿ ಗೀತಾ ಪ್ರಕಾಶ್

ಕಲ್ಲಡ್ಕ: ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಬೆಳೆಸುವಲ್ಲಿ ಪೋಷಕರು ಮತ್ತು ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಮಕ್ಕಳಿಗೆ ಸ್ವತಂತ್ರವಾಗಿ ಯೋಚಿಸಲು, ಹೊಸ ವಿಷಯಗಳನ್ನು ಕಲಿಯಲು ಹಾಗೂ ತಮ್ಮ ಆಸಕ್ತಿಯ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಸೂಕ್ತ ಅವಕಾಶ ಮತ್ತು ಪ್ರೋತ್ಸಾಹ ನೀಡಬೇಕು ಎಂದು ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷೆ ಡಾ. ಗಾಯತ್ರಿ ಗೀತಾ ಪ್ರಕಾಶ್ ಹೇಳಿದರು.

ನ. 12ರಂದು ಮಜಿ ವೀರಕಂಬದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಲ್ಲಡ್ಕ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ-2026 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಂದು ಮಗುವಿನಲ್ಲಿಯೂ ಒಂದಲ್ಲ ಒಂದು ವಿಶೇಷ ಪ್ರತಿಭೆ ಅಡಗಿರುತ್ತದೆ. ಪ್ರತಿಭಾ ಕಾರಂಜಿ, ಕ್ರೀಡಾಕೂಟ, ವಿಜ್ಞಾನ ವಸ್ತುಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಮಕ್ಕಳಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಉತ್ತಮ ವೇದಿಕೆಗಳಾಗಿವೆ. ಮಕ್ಕಳನ್ನು ಪರಸ್ಪರ ಹೋಲಿಕೆ ಮಾಡದೆ ಅವರಲ್ಲಿರುವ ವಿಶಿಷ್ಟ ಸಾಮರ್ಥ್ಯವನ್ನು ಗುರುತಿಸಬೇಕು. ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸುವುದರ ಜೊತೆಗೆ, ಸೂಕ್ತ ಮಾರ್ಗದರ್ಶನ ಮತ್ತು ಪ್ರೋತ್ಸಾಹ ನೀಡಿದಾಗ ಮಕ್ಕಳು ಉತ್ತಮ ಸಾಧಕರಾಗಿ ರೂಪುಗೊಳ್ಳಲು ಸಾಧ್ಯ ಎಂದರು.

ಯುವವಾಹಿನಿ (ರಿ.) ಬಂಟ್ವಾಳ ಘಟಕದ ಅಧ್ಯಕ್ಷ ಕಿರಣ್ ಮಾತನಾಡಿ, ಪ್ರತಿಯೊಂದು ಮಗುವೂ ಪ್ರತಿಭೆಯ ಗಣಿಯಾಗಿದ್ದು, ಅದನ್ನು ಗುರುತಿಸಿ ಪ್ರೋತ್ಸಾಹಿಸುವುದೇ ನಿಜವಾದ ಶಿಕ್ಷಣ. ಮಕ್ಕಳ ಆಸಕ್ತಿ ಮತ್ತು ಅಭಿರುಚಿಗಳನ್ನು ಪೋಷಕರು ಗಮನಿಸಬೇಕು. ತಮ್ಮ ಆಸೆ, ಕನಸು ಹಾಗೂ ನಿರೀಕ್ಷೆಗಳನ್ನು ಮಕ್ಕಳ ಮೇಲೆ ಬಲವಂತವಾಗಿ ಹೇರಬಾರದು. ಮಕ್ಕಳು ಹೊಸ ಪ್ರಯತ್ನಗಳನ್ನು ಮಾಡಿದಾಗ ಪ್ರೋತ್ಸಾಹಿಸಬೇಕು. ತಪ್ಪು ಮಾಡಿದಾಗ ಬೈಯುವ ಬದಲು ಅದರಿಂದ ಪಾಠ ಕಲಿಯುವಂತೆ ಮಾರ್ಗದರ್ಶನ ನೀಡಬೇಕು. ಮಕ್ಕಳ ಸಣ್ಣ ಸಾಧನೆಗಳನ್ನೂ ಮೆಚ್ಚಿ ಆತ್ಮವಿಶ್ವಾಸ ಹೆಚ್ಚಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೊರಗಪ್ಪ ನಾಯ್ಕ ವಹಿಸಿದ್ದರು. ಕೆಲಿಂಜ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮೋಹಿತ್ ಶೆಟ್ಟಿ ಮಾತನಾಡಿ, ಕೆಲಿಂಜ ಶಾಲೆಯಲ್ಲಿ ಪ್ರತಿಭಾ ಕಾರಂಜಿಯನ್ನು ವಿಜೃಂಭಣೆಯಿಂದ ಆಯೋಜಿಸಬೇಕೆಂಬ ಕನಸಿತ್ತು. ಆದರೆ ಮುಖ್ಯ ಶಿಕ್ಷಕರನ್ನು ಕಳೆದುಕೊಂಡ ದುಃಖದ ಸಂದರ್ಭದಲ್ಲಿ ಕಾರ್ಯಕ್ರಮ ನಡೆಸಲು ಸಾಧ್ಯವಾಗದ ಪರಿಸ್ಥಿತಿ ಎದುರಾಯಿತು. ಇಂತಹ ಸಂದರ್ಭದಲ್ಲಿ ಜವಾಬ್ದಾರಿ ವಹಿಸಿಕೊಂಡು, ದಿವಂಗತ ಮುಖ್ಯ ಶಿಕ್ಷಕರ ಗೌರವಾರ್ಥವಾಗಿ ವಿಭಿನ್ನ ರೀತಿಯಲ್ಲಿ ಕಾರ್ಯಕ್ರಮ ಸಂಘಟಿಸಿದ ಮಜಿ ಶಾಲೆಯ ಕಾರ್ಯ ಶ್ಲಾಘನೀಯ ಎಂದರು.

ವೇದಿಕೆಯಲ್ಲಿ ವೀರಕಂಬ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ದಿನೇಶ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಂಭು ಕುಮಾರ್ ಶರ್ಮ, ಪಂಚಾಯತ್ ನಿಕಟಪೂರ್ವ ಉಪಾಧ್ಯಕ್ಷ ಜನಾರ್ದನ ಪೂಜಾರಿ, ಕೆಲಿಂಜ ಶಾಲೆಯ ನಿಕಟಪೂರ್ವ ಅಧ್ಯಕ್ಷ ಹಮೀದ್, ಬಂಟ್ವಾಳ ತಾಲೂಕು ಪಿಡಬ್ಲ್ಯೂಡಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಶೈಲೇಶ್ ಕುರ್ಚಿಗುಡ್ಡೆ, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಈಶ್ವರ ಭಟ್, ಸುಕುಮಾರ್ ಬಂಟ್ವಾಳ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಗಾಯತ್ರಿ ಹಾಗೂ ಶಾಲಾ ನಾಯಕ ಮಹಮ್ಮದ್ ಹಾರೂನ್ ಫರ್ಹಾನ್ ಉಪಸ್ಥಿತರಿದ್ದರು.

ಉದ್ಘಾಟನಾ ಕಾರ್ಯಕ್ರಮದ ಬಳಿಕ ಕಿರಿಯ ಹಾಗೂ ಹಿರಿಯ ವಿಭಾಗಗಳಲ್ಲಿ ವಿವಿಧ ಸ್ಪರ್ಧೆಗಳು ನಡೆದವು. ಕ್ಲಸ್ಟರ್ ವ್ಯಾಪ್ತಿಯ ಶಾಲೆಗಳ ಸುಮಾರು 300 ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಇಲಾಖೆಯ ವತಿಯಿಂದ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಆಶಾ ನಾಯಕ್, ಬಿಐಆರ್‌ಟಿ ಸುರೇಖಾ, ಸಮೂಹ ಸಂಪನ್ಮೂಲ ವ್ಯಕ್ತಿ ಪ್ರತಿಮಾ ಹಾಗೂ ಪ್ರಭಾರ ಸಮನ್ವಯಾಧಿಕಾರಿ ವಿದ್ಯಾ ಆಗಮಿಸಿ ಶುಭ ಹಾರೈಸಿದರು.

ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ಆಕರ್ಷಕ ಸೆಲ್ಫಿ ಕಾರ್ನರ್ ನಿರ್ಮಿಸಲಾಗಿತ್ತು. ಮಿನಿ ಲೈಬ್ರರಿ ರಿಕ್ಷಾವನ್ನು ಶಾಲಾ ಆವರಣದಲ್ಲಿ ನಿಲ್ಲಿಸಿ ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸುವ ಕುರಿತು ಮಾಹಿತಿ ನೀಡಲಾಯಿತು. ವಿಶೇಷ ರೀತಿಯಲ್ಲಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಾಯಿತು.

ಮುಖ್ಯ ಶಿಕ್ಷಕಿ ಬೆನೆಡಿಕ್ಟಾ ಆಗ್ನೇಸ್ ಮಂಡೋನ್ಸಾ ಸ್ವಾಗತಿಸಿದರು. ಸಮೂಹ ಸಂಪನ್ಮೂಲ ವ್ಯಕ್ತಿ ಜ್ಯೋತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ದೈಹಿಕ ಶಿಕ್ಷಕ ಇಂದುಶೇಖರ್ ವಂದಿಸಿದರು. ಶಿಕ್ಷಕ ತೌಸೀಫ್ ಅಹ್ಮದ್ ಹಾಗೂ ಹಿರಿಯ ಶಿಕ್ಷಕಿ ಸಂಗೀತ ಶರ್ಮ ಕಾರ್ಯಕ್ರಮ ನಿರೂಪಿಸಿದರು. ಶಾಲಾಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಶಿಕ್ಷಕಿಯರು ಸಹಕರಿಸಿದರು.

Leave a Reply

Your email address will not be published. Required fields are marked *