ಬಂಟ್ವಾಳ: ತಾಲೂಕಿನ ನರಿಕೊಂಬು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಣೆಮಂಗಳೂರು ಸಮೀಪದ ನೆಹರು ನಗರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕಸಕಡ್ಡಿ ಹಾಗೂ ವಿವಿಧ ತ್ಯಾಜ್ಯ ವಸ್ತುಗಳು ರಾಶಿ ಬಿದ್ದಿದ್ದು, ಶಾಲಾ ಪರಿಸರ ಅಸ್ವಚ್ಛತೆಯಿಂದ ಕೂಡಿದೆ.

ಶಾಲೆಯ ಆವರಣದಲ್ಲೇ ಪ್ಲಾಸ್ಟಿಕ್ ಸೇರಿದಂತೆ ವಿವಿಧ ರೀತಿಯ ತ್ಯಾಜ್ಯಗಳನ್ನು ಎಸೆಯಲಾಗುತ್ತಿದ್ದು, ಇದರಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ತೀವ್ರ ದುರ್ವಾಸನೆ ಹರಡುತ್ತಿದೆ. ಪ್ರತಿದಿನ ಶಾಲೆಗೆ ಆಗಮಿಸುವ ಪುಟಾಣಿ ಮಕ್ಕಳು ಇಂತಹ ಅಸ್ವಚ್ಛ ಪರಿಸರದಲ್ಲೇ ವಿದ್ಯಾಭ್ಯಾಸ ಮಾಡುವಂತಾಗಿದೆ. ಇದರಿಂದ ವಿದ್ಯಾರ್ಥಿಗಳ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುವ ಆತಂಕವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.

ಶಾಲಾ ಪರಿಸರದ ಸ್ವಚ್ಛತೆ ಹಾಗೂ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾದ ಗ್ರಾಮ ಪಂಚಾಯತ್ ಈ ಸಮಸ್ಯೆಯತ್ತ ಸೂಕ್ತ ಗಮನಹರಿಸದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಶಾಲಾ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವುದನ್ನು ತಡೆಯಲು ಗ್ರಾಮ ಪಂಚಾಯತ್ ತಕ್ಷಣ ಕಸ ಸಂಗ್ರಹಣಾ ವಾಹನದ ವ್ಯವಸ್ಥೆ ಕಲ್ಪಿಸಬೇಕು. ಇಲ್ಲವೇ ಸಾರ್ವಜನಿಕರಿಗೆ ಅನುಕೂಲವಾಗುವ ಸೂಕ್ತ ಸ್ಥಳದಲ್ಲಿ ಮುಚ್ಚಳವಿರುವ ಕಸದ ಸಂಗ್ರಹಣಾ ಪೆಟ್ಟಿಗೆಗಳನ್ನು ಅಳವಡಿಸಬೇಕು ಎಂಬುದು ಸ್ಥಳೀಯರ ಪ್ರಮುಖ ಬೇಡಿಕೆಯಾಗಿದೆ.

ಕಸ ವಿಲೇವಾರಿಗೆ ಸೂಕ್ತ ವ್ಯವಸ್ಥೆ ಇಲ್ಲದಿರುವುದರಿಂದ ಸಾರ್ವಜನಿಕರು ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಈಗಾಗಲೇ ರಾಶಿ ಬಿದ್ದಿರುವ ಕಸವನ್ನು ತೆರವುಗೊಳಿಸುವುದರ ಜತೆಗೆ, ಮುಂದಿನ ದಿನಗಳಲ್ಲಿ ಇಂತಹ ಸಮಸ್ಯೆ ಮರುಕಳಿಸದಂತೆ ಶಾಶ್ವತ ಪರಿಹಾರ ಕಲ್ಪಿಸುವುದು ಪಂಚಾಯತ್‌ನ ಜವಾಬ್ದಾರಿಯಾಗಿದೆ.

ಇನ್ನಾದರೂ ಗ್ರಾಮ ಪಂಚಾಯತ್ ಎಚ್ಚೆತ್ತುಕೊಂಡು ಶಾಲಾ ಆವರಣದಲ್ಲಿರುವ ಕಸವನ್ನು ತಕ್ಷಣ ತೆರವುಗೊಳಿಸಿ, ಸೂಕ್ತ ಕಸ ಸಂಗ್ರಹಣಾ ವ್ಯವಸ್ಥೆ ಕಲ್ಪಿಸುವ ಮೂಲಕ ಮಕ್ಕಳಿಗೆ ಸ್ವಚ್ಛ ಹಾಗೂ ಆರೋಗ್ಯಕರ ವಾತಾವರಣ ಒದಗಿಸಬೇಕು ಎಂದು ನೆಹರು ನಗರದ ಸಾರ್ವಜನಿಕರು ಆಗ್ರಹಿಸಿದ್ದಾರೆ.



