Breaking
17 Nov 2026, Tue

ಮಂಗಳೂರು ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ವೇಳೆ ಇಂಜಿನ್ ದೋಷ: ಪೈಲಟ್ ಸಮಯಪ್ರಜ್ಞೆಯಿಂದ 236 ಮಂದಿ ಪಾರು

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ಆಗುವ ಕೊನೆಯ ಕ್ಷಣದಲ್ಲಿ ವಿಮಾನದ ಇಂಜಿನ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಪೈಲಟ್ ಸಮಯಪ್ರಜ್ಞೆ ಮೆರೆದು ವಿಮಾನವನ್ನು ಸುರಕ್ಷಿತವಾಗಿ ನಿಲ್ಲಿಸಿದ ಪರಿಣಾಮ ಭಾರೀ ಅನಾಹುತವೊಂದು ತಪ್ಪಿದ ಘಟನೆ ಸೋಮವಾರ ಸಂಜೆ ನಡೆದಿದೆ.


ಮಂಗಳೂರಿನಿಂದ ಬೆಂಗಳೂರಿಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ವಿಮಾನದಲ್ಲಿ 229 ಪ್ರಯಾಣಿಕರು ಹಾಗೂ 7 ಮಂದಿ ವಿಮಾನ ಸಿಬ್ಬಂದಿ ಸೇರಿದಂತೆ ಒಟ್ಟು 236 ಮಂದಿ ಇದ್ದರು.
ವಿಮಾನವು ರನ್ವೇಯಲ್ಲಿ ಟೇಕ್ ಆಫ್ ಆಗುವ ಸಂದರ್ಭದಲ್ಲಿ ಇಂಜಿನ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿರುವುದು ಪೈಲಟ್ ಗಮನಕ್ಕೆ ಬಂದಿದೆ ಎನ್ನಲಾಗಿದೆ. ತಕ್ಷಣ ಎಚ್ಚೆತ್ತುಕೊಂಡ ಪೈಲಟ್, ಸಮಯಪ್ರಜ್ಞೆ ಮೆರೆದು ಕೊನೆಯ ಕ್ಷಣದಲ್ಲಿ ಬ್ರೇಕ್ ಹಾಕಿ ವಿಮಾನವನ್ನು ಸುರಕ್ಷಿತವಾಗಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದರಿಂದ ವಿಮಾನದಲ್ಲಿದ್ದ 236 ಮಂದಿ ಅಪಾಯದಿಂದ ಪಾರಾಗಿದ್ದಾರೆ. ಬಳಿಕ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ವಿಮಾನದಿಂದ ಕೆಳಗಿಳಿಸಲಾಗಿದ್ದು, ಅವರ ಬೆಂಗಳೂರು ಪ್ರಯಾಣಕ್ಕಾಗಿ ಇಂಡಿಗೋ ಸಿಬ್ಬಂದಿ ಪರ್ಯಾಯ ವಿಮಾನದ ವ್ಯವಸ್ಥೆ ಕಲ್ಪಿಸಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *