ಬಂಟ್ವಾಳ: ಬೆಂಗಳೂರು ಮೂಲಕ ಮಂಗಳೂರು ಮಾರ್ಗವಾಗಿ ಗೋವಾಕ್ಕೆ ಸಂಪರ್ಕ ಕಲ್ಪಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಬಂಟ್ವಾಳ ರೈಲು ನಿಲ್ದಾಣದಲ್ಲಿ ನಿಲುಗಡೆ ಕಲ್ಪಿಸುವಂತೆ ಮಾಜಿ ಬಂಟ್ವಾಳ ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು ಅವರು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಬೆಂಗಳೂರು–ಮಡಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭಿಸಿರುವುದು ಕರಾವಳಿ ಹಾಗೂ ಮಲೆನಾಡಿನ ಜನತೆಗೆ ಸಂತಸ ತಂದಿದೆ. ವೇಗದ ಹಾಗೂ ಸುಸಜ್ಜಿತ ಪ್ರಯಾಣದ ಅನುಕೂಲ ಕಲ್ಪಿಸಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಕೃತಜ್ಞತೆ ಸಲ್ಲಿಸಿರುವ ಅವರು, ರೈಲು ಯೋಜನೆಯ ಅನುಷ್ಠಾನಕ್ಕೆ ಶ್ರಮಿಸಿದ ಸಂಸದ ಬ್ರಿಜೇಶ್ ಚೌಟ ಅವರಿಗೂ ಅಭಿನಂದನೆ ತಿಳಿಸಿದ್ದಾರೆ.
ಈ ರೈಲು ಹಲವು ತಾಲೂಕು ಕೇಂದ್ರಗಳ ವ್ಯಾಪ್ತಿಯ ರೈಲು ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿದ್ದರೂ, ಬಂಟ್ವಾಳದಲ್ಲಿ ನಿಲುಗಡೆಗೆ ಅವಕಾಶ ಕಲ್ಪಿಸದಿರುವುದು ಈ ಭಾಗದ ಪ್ರಯಾಣಿಕರಿಗೆ ನಿರಾಸೆ ಉಂಟುಮಾಡಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಬಂಟ್ವಾಳ ರೈಲು ನಿಲ್ದಾಣವು ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕಿನ ಬಹುಭಾಗದ ಮತ್ತು ಪುತ್ತೂರು ತಾಲೂಕಿನ ಕೆಲವು ಭಾಗದ ಜನರಿಗೆ ಅನುಕೂಲಕರವಾಗಿದೆ. ಇಲ್ಲಿ ರೈಲು ನಿಲುಗಡೆ ಕಲ್ಪಿಸಿದರೆ ಈ ಮೂರು ತಾಲೂಕುಗಳ ಪ್ರಯಾಣಿಕರಿಗೆ ಗೋವಾ ಸೇರಿದಂತೆ ವಿವಿಧ ಪ್ರದೇಶಗಳಿಗೆ ವೇಗದ ರೈಲು ಪ್ರಯಾಣದ ಅನುಕೂಲ ದೊರೆಯಲಿದೆ.

ಆದ್ದರಿಂದ ಸಂಬಂಧಪಟ್ಟ ರೈಲ್ವೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಬಂಟ್ವಾಳ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ನಿಲುಗಡೆ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಪ್ರಭಾಕರ ಪ್ರಭು ಅವರು ಸಂಸದರಿಗೆ ಮನವಿ ಮಾಡಿದ್ದಾರೆ.



