ಬೆಳ್ತಂಗಡಿ: ಸರ್ಕಾರಿ ಶಾಲಾ-ಕಾಲೇಜುಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿ, ಮಕ್ಕಳಲ್ಲಿ ದೇಶಪ್ರೇಮ ಹಾಗೂ ವಿದ್ಯಾರ್ಥಿಗಳ ನಡುವೆ ಪ್ರೀತಿ, ಸೌಹಾರ್ದ ಬೆಳೆಸುವ ಕೆಲಸ ಮಾಡಬೇಕೇ ಹೊರತು ಅಸೂಯೆ ಮತ್ತು ದ್ವೇಷದ ಭಾವನೆಗಳನ್ನು ಬಿತ್ತುವ ಕೆಲಸ ಮಾಡಬಾರದು. ಶಾಸಕ ಹರೀಶ್ ಪೂಂಜಾ ಅವರು ತಮ್ಮ ಪ್ರಚಾರದ ತೆವಲಿಗಾಗಿ ಅಪ್ರಾಪ್ತ ಮಕ್ಕಳ ನಡುವೆ ರಾಜಕೀಯ ಭಾಷಣ ಮಾಡಿರುವುದು ಅವರ ರಾಜಕೀಯ ದಿವಾಳಿತನಕ್ಕೆ ಸಾಕ್ಷಿಯಾಗಿದೆ ಎಂದು ಸಾಮಾಜಿಕ ಹೋರಾಟಗಾರ ಶೇಖರ್ ಲಾಯಿಲ ಟೀಕಿಸಿದ್ದಾರೆ.

ಶಾಸಕ ಹರೀಶ್ ಪೂಂಜಾ ಅವರಿಗೆ ಎಲ್ಲಿ, ಯಾವಾಗ ಮತ್ತು ಏನು ಮಾತನಾಡಬೇಕು ಎಂಬ ಸಾಮಾನ್ಯ ಜ್ಞಾನವಿಲ್ಲ. ಜೊತೆಗೆ ಅನುಭವದ ಕೊರತೆಯೂ ಇದೆ. ಈ ಕೊರತೆಯನ್ನು ನೀಗಿಸಿಕೊಳ್ಳಲು ತಾವು ಭಾಷಣ ಮಾಡಿದ ಕಾಲೇಜಿನ ಅಪ್ರಾಪ್ತ ವಿದ್ಯಾರ್ಥಿಗಳಿಂದಲೇ ಪಾಠ ಕಲಿಯಬೇಕಾದ ಅಗತ್ಯವಿದೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳು ಸಹಜ. ಆದರೆ ತಮ್ಮ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಅಪ್ರಾಪ್ತ ಮಕ್ಕಳ ಮೇಲೆ ಬಲವಂತವಾಗಿ ಹೇರುವುದು ಸರ್ವಾಧಿಕಾರಿ ಮನೋಭಾವದ ಪ್ರತೀಕವಾಗಿದೆ. ಅಪ್ರಾಪ್ತ ಮಕ್ಕಳ ನಡುವೆ ಗೊಂದಲ ಮತ್ತು ದ್ವೇಷದ ಭಾವನೆಗಳನ್ನು ಹುಟ್ಟುಹಾಕುವ ಪ್ರಯತ್ನ ಮೂರ್ಖತನದ ಪರಮಾವಧಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎರಡನೇ ಅವಧಿಗೆ ಶಾಸಕರಾದ ಬಳಿಕ ದ್ವೇಷ ಭಾಷಣಕಾರರಂತೆ ಹಾಗೂ ಗಲಭೆ, ಗಲಾಟೆಗಳಿಗೆ ಪ್ರಚೋದನೆ ನೀಡುವ ರೀತಿಯಲ್ಲಿ ವರ್ತಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಶಾಸಕ ಹರೀಶ್ ಪೂಂಜಾ ಅವರು ತಮ್ಮ ವರ್ತನೆಯ ಮೂಲಕ ಬೆಳ್ತಂಗಡಿ ಕ್ಷೇತ್ರದ ಜನರ ಗೌರವಕ್ಕೆ ಧಕ್ಕೆ ತರುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಸೋಲುವ ಭಯದಿಂದ ಹಾದಿಬೀದಿಗಳಲ್ಲಿ ರಾಜಕೀಯ ಮಾಡಲು ಹೊರಟಿದ್ದಾರೆ ಎಂದು ಟೀಕಿಸಿದ್ದಾರೆ.

ಇಂತಹ ರಾಜಕೀಯ ವರ್ತನೆಯನ್ನು ಸಹಿಸಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಹಾದಿಬೀದಿಯಲ್ಲೇ ಪ್ರತ್ಯುತ್ತರ ನೀಡಬೇಕಾಗುತ್ತದೆ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಲಿ ಎಂದು ಸಾಮಾಜಿಕ ಹೋರಾಟಗಾರ ಶೇಖರ್ ಲಾಯಿಲ ಎಚ್ಚರಿಕೆ ನೀಡಿದ್ದಾರೆ.


