Breaking
19 Nov 2026, Thu

ಜಿ.ಪಂ., ತಾ.ಪಂ. ಅಂತಿಮ ಮೀಸಲಾತಿ ಪ್ರಕಟಿಸಿ ಚುನಾವಣೆ ದಿನಾಂಕ ಘೋಷಿಸಿ: ಪ್ರಭಾಕರ ಪ್ರಭು ಆಗ್ರಹ

ಸಿದ್ದಕಟ್ಟೆ: ಕಳೆದ ಐದು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳನ್ನು ಶೀಘ್ರ ನಡೆಸುವ ನಿಟ್ಟಿನಲ್ಲಿ ರಾಜ್ಯ ಚುನಾವಣಾ ಆಯೋಗವು ಅಂತಿಮ ಮೀಸಲಾತಿ ಪಟ್ಟಿ ಪ್ರಕಟಿಸಿ, ಚುನಾವಣಾ ದಿನಾಂಕವನ್ನು ಘೋಷಣೆ ಮಾಡಬೇಕೆಂದು ಮಾಜಿ ಬಂಟ್ವಾಳ ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು ಆಗ್ರಹಿಸಿದ್ದಾರೆ.

ಈ ಕುರಿತು ರಾಜ್ಯ ಚುನಾವಣಾ ಆಯೋಗದ ಆಯುಕ್ತರಿಗೆ ಮನವಿ ಸಲ್ಲಿಸಿರುವ ಅವರು, ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆ ನಡೆಸುವ ಸಂಬಂಧ ಚುನಾವಣಾ ಆಯೋಗವೇ ಹೈಕೋರ್ಟ್ ಮೊರೆ ಹೋಗಿ, ಚುನಾವಣೆ ನಡೆಸಲು ಅನುಕೂಲವಾಗುವಂತೆ ನ್ಯಾಯಾಲಯದಲ್ಲಿ ವಾದ ಮಂಡಿಸಿರುವುದು ಶ್ಲಾಘನೀಯ ಕ್ರಮವಾಗಿದೆ. ನ್ಯಾಯಾಲಯದ ಮಧ್ಯಪ್ರವೇಶದ ಬಳಿಕ ರಾಜ್ಯ ಸರಕಾರವೂ ಶೀಘ್ರ ಚುನಾವಣೆ ನಡೆಸಲು ಒಪ್ಪಿಗೆ ಸೂಚಿಸಿ, ಅಗತ್ಯ ಆರ್ಥಿಕ ಸಂಪನ್ಮೂಲಗಳನ್ನು ಒದಗಿಸಿದೆ ಎಂದು ತಿಳಿಸಿದ್ದಾರೆ.

ಇದರಂತೆ ಚುನಾವಣಾ ಆಯೋಗವು ಕ್ಷೇತ್ರವಾರು ತಾತ್ಕಾಲಿಕ ಮೀಸಲಾತಿ ಪಟ್ಟಿ ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ಒಂದು ತಿಂಗಳ ಕಾಲಾವಕಾಶ ನೀಡಿದೆ. ಅಲ್ಲದೆ, ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳ ನೇಮಕಕ್ಕೆ ಜಿಲ್ಲಾಧಿಕಾರಿಗಳಿಂದ ಪ್ರಸ್ತಾವನೆಗಳನ್ನು ತರಿಸಿಕೊಂಡಿರುವುದು ಚುನಾವಣಾ ಪ್ರಕ್ರಿಯೆಗೆ ಪೂರಕವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಆದರೆ, ತಾತ್ಕಾಲಿಕ ಮೀಸಲಾತಿ ಪ್ರಕಟಿಸಿ ಆಕ್ಷೇಪಣೆ ಸಲ್ಲಿಸಲು ನೀಡಿದ ಅವಧಿ ಮುಗಿದು ಒಂದು ತಿಂಗಳಾದರೂ ಅಂತಿಮ ಮೀಸಲಾತಿ ಪ್ರಕಟಿಸದಿರುವುದು ಚುನಾವಣೆಯಲ್ಲಿ ಸ್ಪರ್ಧಿಸಲು ಉತ್ಸುಕರಾಗಿರುವ ಸಂಭಾವ್ಯ ಅಭ್ಯರ್ಥಿಗಳಲ್ಲಿ ಆತಂಕ ಮೂಡಿಸಿದೆ. ಮೀಸಲಾತಿಯಲ್ಲಿ ದೊಡ್ಡ ಮಟ್ಟದ ಬದಲಾವಣೆಯಾಗಬಹುದೆಂಬ ಚರ್ಚೆಗಳೂ ನಡೆಯುತ್ತಿವೆ ಎಂದು ತಿಳಿಸಿದ್ದಾರೆ.

ಈ ಬಾರಿ ಕ್ಷೇತ್ರ ಪುನರ್ ವಿಂಗಡಣೆ ಮಾಡಿರುವ ಹಿನ್ನೆಲೆಯಲ್ಲಿ ಈಗಾಗಲೇ ಪ್ರಕಟಿಸಿರುವ ತಾತ್ಕಾಲಿಕ ಮೀಸಲಾತಿಯಲ್ಲಿ ಹೆಚ್ಚಿನ ಬದಲಾವಣೆ ಮಾಡುವ ಅಗತ್ಯವಿಲ್ಲ ಎಂಬ ಅಭಿಪ್ರಾಯವೂ ಕಾನೂನು ತಜ್ಞರಿಂದ ವ್ಯಕ್ತವಾಗಿದೆ. ಒಂದು ವೇಳೆ ಅಂತಿಮ ಮೀಸಲಾತಿಯಲ್ಲಿ ಗಣನೀಯ ವ್ಯತ್ಯಾಸ ಕಂಡುಬಂದರೆ ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಹಾಗೂ ಘನತೆಗೆ ಧಕ್ಕೆಯಾಗುವ ಸಾಧ್ಯತೆಯಿದೆ ಎಂದು ಅವರು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಚುನಾವಣೆ ನಡೆಸುವ ಉದ್ದೇಶದಿಂದ ನ್ಯಾಯಾಲಯದ ಮೊರೆ ಹೋಗಿರುವ ಆಯೋಗವೇ ಇದೀಗ ಚುನಾವಣಾ ಪ್ರಕ್ರಿಯೆಯಲ್ಲಿ ವಿಳಂಬ ಮಾಡುವುದು ಸರಿಯಲ್ಲ. ಆದ್ದರಿಂದ ತಕ್ಷಣ ಅಂತಿಮ ಮೀಸಲಾತಿ ಪಟ್ಟಿ ಪ್ರಕಟಿಸಿ, ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳ ದಿನಾಂಕವನ್ನು ಶೀಘ್ರ ಘೋಷಿಸುವ ಮೂಲಕ ಸ್ಥಳೀಯ ಸ್ವರಾಜ್ಯ ಸಂಸ್ಥೆಗಳಿಗೆ ಮರುಜೀವ ನೀಡಬೇಕೆಂದು ಪ್ರಭಾಕರ ಪ್ರಭು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *