Breaking
20 Nov 2026, Fri

ಶಿಶಿಲ–ಬೈರಾಪುರ ರಸ್ತೆ ಸಂಪರ್ಕಕ್ಕೆ ವೇಗ: ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಅಧಿಕಾರಿಗಳ ಸಭೆ

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ನಡುವಿನ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿಯ ದಶಕಗಳ ಬೇಡಿಕೆಗೆ ಸ್ಪಂದಿಸುವ ನಿಟ್ಟಿನಲ್ಲಿ ಶಾಸಕ ಹರೀಶ್ ಪೂಂಜ ಅವರು ವಿಶೇಷ ಮುತುವರ್ಜಿ ವಹಿಸಿದ್ದು, ರಸ್ತೆ ಸಂಪರ್ಕದ ಸಾಧ್ಯತೆಗಳ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಯಿತು.

ಹಿಂದಿನ ಕಾಲದಲ್ಲಿ ವಾಹನ ಸಂಚಾರಕ್ಕೆ ಪ್ರಮುಖ ಮಾರ್ಗವಾಗಿದ್ದ ಈ ರಸ್ತೆಯ ಪುನರುಜ್ಜೀವನಕ್ಕಾಗಿ ಸ್ಥಳೀಯರು ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದಾರೆ. ರಸ್ತೆ ಸಂಪರ್ಕ ಪುನಃ ಕಲ್ಪಿಸುವುದರಿಂದ ಎರಡೂ ಜಿಲ್ಲೆಗಳ ಗ್ರಾಮೀಣ ಭಾಗದ ಜನರಿಗೆ ಸಂಚಾರ, ಶಿಕ್ಷಣ, ಆರೋಗ್ಯ, ಕೃಷಿ ಹಾಗೂ ವ್ಯಾಪಾರ ಚಟುವಟಿಕೆಗಳಿಗೆ ಹೆಚ್ಚಿನ ಅನುಕೂಲವಾಗಲಿದೆ.

ಇತ್ತೀಚೆಗೆ ನಡೆದ ಹಕ್ಕೊತ್ತಾಯ ಸಮಾವೇಶದಲ್ಲಿ ಭಾಗವಹಿಸಿದ್ದ ಶಾಸಕ ಹರೀಶ್ ಪೂಂಜ ಅವರು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ, ರಸ್ತೆ ಸಂಪರ್ಕದ ಸಾಧ್ಯತೆಗಳ ಕುರಿತು ಸಮಗ್ರ ಯೋಜನಾ ವರದಿ (DPR) ಸಿದ್ಧಪಡಿಸುವ ಭರವಸೆ ನೀಡಿದ್ದರು. ಅದರಂತೆ ಪ್ರಸ್ತಾವಿತ ರಸ್ತೆ ಮಾರ್ಗದ ಸ್ಥಳ ಪರಿಶೀಲನೆಯನ್ನೂ ನಡೆಸಲಾಗಿತ್ತು.

ಇದರ ಮುಂದುವರಿದ ಭಾಗವಾಗಿ ನ.19ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಶಾಸಕ ಹರೀಶ್ ಪೂಂಜ ಅವರ ಉಪಸ್ಥಿತಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಯಿತು.

ಸಭೆಯಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಕಾರ್ಯಪಾಲಕ ಅಭಿಯಂತರರು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು. ಪ್ರಸ್ತಾವಿತ ರಸ್ತೆ ಮಾರ್ಗದ ತಾಂತ್ರಿಕ ಸಾಧ್ಯತೆಗಳು, ಅರಣ್ಯ ಪ್ರದೇಶಕ್ಕೆ ಸಂಬಂಧಿಸಿದ ನಿಯಮಗಳು, ಅಗತ್ಯ ಅನುಮತಿಗಳು, ಭೂಮಿಯ ಸ್ವರೂಪ ಹಾಗೂ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದ ವಿವಿಧ ತಾಂತ್ರಿಕ ಅಂಶಗಳ ಕುರಿತು ಚರ್ಚಿಸಲಾಯಿತು.

ಅಲ್ಲದೆ, ಸಮಗ್ರ ಯೋಜನಾ ವರದಿ ಸಿದ್ಧಪಡಿಸಲು ಅಗತ್ಯವಿರುವ ಸ್ಥಳ ಪರಿಶೀಲನೆ, ದಾಖಲೆಗಳ ಸಂಗ್ರಹ, ಇಲಾಖಾವಾರು ಜವಾಬ್ದಾರಿಗಳು ಹಾಗೂ ವರದಿ ಸಿದ್ಧಪಡಿಸುವ ಕಾಲಮಿತಿಯ ಬಗ್ಗೆಯೂ ಸಮಾಲೋಚನೆ ನಡೆಸಲಾಯಿತು.

ಶಿಶಿಲ–ಬೈರಾಪುರ ರಸ್ತೆ ಸಂಪರ್ಕದ ಬಹುದಶಕಗಳ ಬೇಡಿಕೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಡಿಪಿಆರ್ ಸಿದ್ಧಪಡಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸಿ, ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಲು ಸಂಬಂಧಪಟ್ಟ ಇಲಾಖೆಗಳ ಸಮನ್ವಯದೊಂದಿಗೆ ಮುಂದಿನ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಸೂಚಿಸಲಾಯಿತು.

Leave a Reply

Your email address will not be published. Required fields are marked *