ಬೆಳ್ತಂಗಡಿ: ತಾಲೂಕಿನ ಹೊಸಂಗಡಿ ಗ್ರಾಮದ ಬಲ್ಲಂಗೇರಿಯ ನದಿ ತೀರದಲ್ಲಿ ನೆಲೆಸಿರುವ ಪುರಾತನ ಶ್ರೀ ಸೂರ್ಯನಾರಾಯಣ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಅಂತಿಮ ಹಂತ ತಲುಪಿದ್ದು, ದೇವಸ್ಥಾನದ ಪ್ರತಿಷ್ಠಾಪನೆ ಹಾಗೂ ಬ್ರಹ್ಮಕಲಶೋತ್ಸವಕ್ಕೆ ಸಿದ್ಧತೆಗಳು ಆರಂಭಗೊಂಡಿವೆ.

ಪ್ರಶಾಂತ ನದಿ ತೀರದಲ್ಲಿರುವ ಈ ಪವಿತ್ರ ಕ್ಷೇತ್ರದಲ್ಲಿ ಪುರಾತನ ದೇವಸ್ಥಾನದ ಕುರುಹುಗಳು ಪತ್ತೆಯಾದ ಹಿನ್ನೆಲೆಯಲ್ಲಿ ಸ್ಥಳವನ್ನು ಸ್ವಚ್ಛಗೊಳಿಸಿ ಪರಿಶೀಲನೆ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಅತ್ಯಂತ ಪುರಾತನವಾದ ಶ್ರೀ ಸೂರ್ಯನಾರಾಯಣ ಸ್ವಾಮಿಯ ದೈವಿಕ ಸನ್ನಿಧಿ ಇರುವುದು ದೃಢಪಟ್ಟಿತ್ತು. ಬಳಿಕ ಊರಿನವರು ಹಾಗೂ ಭಕ್ತರು ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಕೈಜೋಡಿಸಿದ್ದರು.
ಪರವೂರ ಭಕ್ತರ ಸಹಕಾರ, ದಾನಿಗಳ ಉದಾರ ನೆರವು ಹಾಗೂ ವಿವಿಧ ಸಂಘ-ಸಂಸ್ಥೆಗಳ ಶ್ರಮದಾನದ ಫಲವಾಗಿ ಸುಂದರ ದೇವಸ್ಥಾನದ ನಿರ್ಮಾಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಳ್ಳುವ ಹಂತ ತಲುಪಿದೆ.

ದೇವಸ್ಥಾನದ ಪ್ರತಿಷ್ಠಾಪನೆ ಹಾಗೂ ಬ್ರಹ್ಮಕಲಶೋತ್ಸವವು 2027ರ ಫೆಬ್ರವರಿ 7ರಿಂದ 10ರವರೆಗೆ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ ಎಂದು ಜೀರ್ಣೋದ್ಧಾರ ಮತ್ತು ಆರಾಧನಾ ಸಮಿತಿ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಪಾಣೀಮೇರು ಭಜನಾ ಮಂದಿರದಲ್ಲಿ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ ನಡೆಯಿತು. ಬ್ರಹ್ಮಕಲಶ ಸಮಿತಿಯ ಪ್ರಧಾನ ಸಂಚಾಲಕ ಜಯಂತ್ ಕೋಟ್ಯಾನ್ ಹಾಗೂ ಕಾರ್ಯಾಧ್ಯಕ್ಷ ಕಿರಣ್ ಮಂಜಿಲ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬ್ರಹ್ಮಕಲಶೋತ್ಸವದ ಸಿದ್ಧತೆಗಳು, ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಮತ್ತು ಭಕ್ತರ ಸಹಭಾಗಿತ್ವದ ಕುರಿತು ಸಮಾಲೋಚನೆ ನಡೆಸಲಾಯಿತು.



