ಮಂಗಳೂರು: ಸಹಕಾರಿ ಕ್ಷೇತ್ರವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಕರಾವಳಿ ಭಾಗದಲ್ಲಿ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಬಲಪಡಿಸಬೇಕು. ಜಾತಿ, ಮತಗಳ ಭೇದವಿಲ್ಲದೆ ಜನರಿಗೆ ನೇರವಾಗಿ ನೆರವಾಗಲು ಸಹಕಾರಿ ಸಂಘಗಳು ಉತ್ತಮ ವೇದಿಕೆಯಾಗಿದ್ದು, ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಪಕ್ಷ ಸಂಘಟನೆಗೆ ಕಾರ್ಯಕರ್ತರು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.

ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಅವರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ ಮಾತನಾಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳು ಪಕ್ಷದ ಮೂಲ ಬೇರುಗಳಿದ್ದಂತೆ. ಜಿಲ್ಲೆಯಲ್ಲಿ ಇನ್ನೂ ಸಹಕಾರಿ ಸಂಘಗಳು ಸ್ಥಾಪನೆಯಾಗದ ಗ್ರಾಮಗಳನ್ನು ಗುರುತಿಸಿ ಪಟ್ಟಿ ನೀಡಿದರೆ, ತಕ್ಷಣ ಅಧಿಕಾರಿಗಳ ಮೂಲಕ ಸಂಘಗಳ ನೋಂದಣಿ ಮಾಡಿಸಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ (DCC ಬ್ಯಾಂಕ್) ಸದಸ್ಯತ್ವ ಕೊಡಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಕರಾವಳಿಯ ಮೂರು ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಿ ಬಲಪಡಿಸಲು ತಾವು ಸಂಪೂರ್ಣ ಬದ್ಧರಾಗಿರುವುದಾಗಿ ತಿಳಿಸಿದರು.
2008ರಲ್ಲಿ ತಾವು ಸಹಕಾರ ಸಚಿವರಾಗಿದ್ದ ಸಂದರ್ಭದಲ್ಲಿ ಕೃಷಿ ಸಾಲದ ಬಡ್ಡಿದರವನ್ನು ಶೇ.3ಕ್ಕೆ ಇಳಿಸಲಾಗಿತ್ತು. ಅಂದಿನ ಪ್ರಧಾನಿ ಡಾ. ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ನಿಗದಿತ ಅವಧಿಗಿಂತ ಮುಂಚಿತವಾಗಿ ಸಾಲ ಮರುಪಾವತಿ ಮಾಡುವ ರೈತರಿಗೆ ಶೇ.3ರಷ್ಟು ಬಡ್ಡಿ ಸಹಾಯಧನ ಘೋಷಿಸಿತ್ತು. ಇದರ ಪರಿಣಾಮವಾಗಿ ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಕೃಷಿ ಸಾಲ ದೊರೆಯುವಂತಾಯಿತು. ಈ ವಿಚಾರವನ್ನು ಜನರಿಗೆ ತಲುಪಿಸುವ ಕೆಲಸವಾಗಬೇಕು ಎಂದು ಹೇಳಿದರು.

ಜೈನ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಿಎಂ ಅನುಮೋದನೆ
ಕಾಂಗ್ರೆಸ್ ಪಕ್ಷದ ಹಸ್ತದ ಚಿಹ್ನೆಯ ಇತಿಹಾಸವನ್ನು ಸ್ಮರಿಸಿದ ಸಚಿವರು, ತುರ್ತು ಪರಿಸ್ಥಿತಿಯ ಬಳಿಕ ಪಕ್ಷದ ಚಿಹ್ನೆ ವಿಚಾರದಲ್ಲಿ ವಿವಾದ ಎದುರಾದ ಸಂದರ್ಭದಲ್ಲಿ ಕರಾವಳಿಯ ಜೈನ ಮುನಿ ಶ್ರೀ ವಿದ್ಯಾನಂದ ಮುನಿಗಳು ಇಂದಿರಾ ಗಾಂಧಿ ಅವರಿಗೆ ಬೆಳ್ಳಿಯ ಹಸ್ತದ ಚಿಹ್ನೆಯನ್ನು ನೀಡಿ ಆಶೀರ್ವದಿಸಿದ್ದರು ಎಂದು ನೆನಪಿಸಿಕೊಂಡರು.

ಜೈನ ಸಮುದಾಯದ ಕೊಡುಗೆಯನ್ನು ಸ್ಮರಿಸುವುದರ ಜೊತೆಗೆ ಕರಾವಳಿ ಭಾಗದಲ್ಲಿ ಜೈನ ಸಮುದಾಯದ ಬೇಡಿಕೆಗೆ ಸ್ಪಂದಿಸುವ ಉದ್ದೇಶದಿಂದ ಪ್ರತ್ಯೇಕ ಜೈನ ಅಭಿವೃದ್ಧಿ ನಿಗಮ ಸ್ಥಾಪನೆಗೆ ಎರಡು ದಿನಗಳ ಹಿಂದೆಯಷ್ಟೇ ಮುಖ್ಯಮಂತ್ರಿ ಅವರಿಂದ ಕಡತಕ್ಕೆ ಅನುಮೋದನೆ ಪಡೆಯಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಅವರು ಸಚಿವ ಲಕ್ಷ್ಮಣ ಸವದಿ ಅವರನ್ನು ಗೌರವಿಸಿದರು.
ಮಾಜಿ ಸಚಿವ ಬಿ. ರಮಾನಾಥ ರೈ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಪರಿಸರ ಮತ್ತು ಪ್ರವಾಸೋದ್ಯಮ ನಿಗಮದ ಅಧ್ಯಕ್ಷೆ ಶಾಲೆಟ್ ಪಿಂಟೋ, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ವಿಶ್ವಾಸ್ ದಾಸ್, ಶುಭೋದಯ ಆಳ್ವ, ಬ್ಲಾಕ್ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


