ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ.) ವತಿಯಿಂದ ನಡೆಸಲ್ಪಡುವ ಎಲ್.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಭಾರತದ ಮೊದಲ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನದ ಅಂಗವಾಗಿ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಈ ಪ್ರಯುಕ್ತ ಬೆಳಗ್ಗೆ ವಿಶೇಷ ಸಭಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಿಕ್ಷಕ ವೃಂದದವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಬಳಿಕ ಪಂಡಿತ್ ಜವಾಹರಲಾಲ್ ನೆಹರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಲಾಯಿತು.
ಸಹಶಿಕ್ಷಕಿ ಚೈತ್ರಶ್ರೀ ಅವರು ಮಕ್ಕಳ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿ, “ಮಕ್ಕಳಾದ ನೀವು ಮುಗ್ಧ ಮನಸ್ಸಿನ ಹೂವುಗಳು. ನಿಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸಿಕೊಂಡು, ಸದಾ ಕ್ರಿಯಾಶೀಲರಾಗಿದ್ದು, ಉತ್ತಮ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಇದೇ ಸಂದರ್ಭದಲ್ಲಿ ಸಂಸ್ಥೆಯ ಶಿಕ್ಷಕ-ಶಿಕ್ಷಕಿಯರು ನೃತ್ಯದ ಮೂಲಕ ವಿದ್ಯಾರ್ಥಿಗಳನ್ನು ರಂಜಿಸಿ ಮಕ್ಕಳ ದಿನಾಚರಣೆಯ ಸಂಭ್ರಮವನ್ನು ಇಮ್ಮಡಿಗೊಳಿಸಿದರು. ವಿವಿಧ ತರಗತಿಗಳ ವಿದ್ಯಾರ್ಥಿಗಳಿಗೆ ಮನರಂಜನಾತ್ಮಕ ಸ್ಪರ್ಧೆಗಳನ್ನು ಆಯೋಜಿಸಿ, ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಜೋಸ್ಟನ್ ಲೋಬೊ, ಸಂಯೋಜಕ ಯಶವಂತ್ ಜಿ. ನಾಯಕ್, ಮುಖ್ಯ ಶಿಕ್ಷಕಿ ವಿಜಯ ಕೆ., ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಸಹಶಿಕ್ಷಕಿ ಆತ್ಮಿಕ ಕಾರ್ಯಕ್ರಮ ನಿರೂಪಿಸಿದರು. ವೈಷ್ಣವಿ ಸ್ವಾಗತಿಸಿದರು ಹಾಗೂ ಸೋನಾಲ್ ವಂದಿಸಿದರು.





