ಮೈಸೂರು: ಹೂಟಗಳ್ಳಿಯ ಕೆಎಚ್‌ಬಿ ಬಡಾವಣೆಯ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘ (ರಿ.) ವತಿಯಿಂದ 71ನೇ ಕನ್ನಡ ರಾಜ್ಯೋತ್ಸವವನ್ನು ನ.22ರ ಭಾನುವಾರ ಬೆಳಗ್ಗೆ ಸಂಭ್ರಮದಿಂದ ಆಚರಿಸಲಾಯಿತು.
ಇದೇ ಸಂದರ್ಭದಲ್ಲಿ ಸಂಘದ ಸಂಸ್ಥಾಪಕ ಅಧ್ಯಕ್ಷ ದಿವಂಗತ ಕೃಷ್ಣನ್ ಹಾಗೂ ನಿಕಟಪೂರ್ವ ಅಧ್ಯಕ್ಷ ದಿವಂಗತ ಮಾದೇಗೌಡ ಅವರ ಸ್ಮರಣಾರ್ಥ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಸಂಘದ ಅಧ್ಯಕ್ಷ ದಾಸೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಸುರೇಶ್, ಕೊರ್ಗಳ್ಳಿ ನೆಂಜುಂಡೇಗೌಡ, ಗ್ರಾಮ ಪಂಚಾಯಿತಿ ಸದಸ್ಯ ಸಿದ್ದರಾಜು, ಸಂಘದ ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ಅವರ ಕುಟುಂಬದವರು ಉಪಸ್ಥಿತರಿದ್ದರು.

ಸರ್ವಕಲಾ ಸೇವಾ ಟ್ರಸ್ಟ್‌ನ ಅಧ್ಯಕ್ಷೆ ನೀಮಾ ಲೋಬೋ ಹಾಗೂ ಜನಿಷಾ ಲೋಬೋ ಅವರು ಭಾಗವಹಿಸಿದ್ದರು.
ಕನ್ನಡ ನಾಡು, ನುಡಿ, ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಯ ಮಹತ್ವವನ್ನು ಸಾರುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಹಾರೈಸಿದ ಶಾಸಕ ಜಿ.ಟಿ. ದೇವೇಗೌಡ ಸೇರಿದಂತೆ ಎಲ್ಲ ಗಣ್ಯರಿಗೆ ಸಂಘದ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು.
ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಪದಾಧಿಕಾರಿಗಳು, ಮಾಜಿ ಅಧ್ಯಕ್ಷರು, ಸದಸ್ಯರು, ಕುಲಬಾಂಧವರು ಹಾಗೂ ಕುಟುಂಬದವರಿಗೆ ಸಂಘದ ವತಿಯಿಂದ ಅಭಿನಂದನೆ ಮತ್ತು ಧನ್ಯವಾದಗಳನ್ನು ಅರ್ಪಿಸಲಾಯಿತು.



