ಬಂಟ್ವಾಳ: ಮಕ್ಕಳು ಬಾಲ್ಯದಲ್ಲಿಯೇ ಅಂಗನವಾಡಿ ಕೇಂದ್ರಗಳ ಮೂಲಕ ಆಟದೊಂದಿಗೆ ಕಲಿಕೆಯಲ್ಲಿ ತೊಡಗಿಸಿಕೊಂಡಾಗ ಅವರ ಸರ್ವಾಂಗೀಣ ಬೆಳವಣಿಗೆಗೆ ಶಿಕ್ಷಣ ಮಹತ್ವದ ಪಾತ್ರ ವಹಿಸುತ್ತದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಹೇಳಿದರು.

ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಎಲ್ಪೇಲು ಎಂಬಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಪಂಚಾಯಿತಿ, ಬಂಟ್ವಾಳ ಶಿಶು ಅಭಿವೃದ್ಧಿ ಯೋಜನೆ, ಕುಕ್ಕಿಪಾಡಿ ಗ್ರಾಮ ಪಂಚಾಯಿತಿ ಹಾಗೂ ಬಾಲವಿಕಾಸ ಸಮಿತಿಯ ಸಹಭಾಗಿತ್ವದಲ್ಲಿ ನಿರ್ಮಿಸಲಾದ ಅಂಗನವಾಡಿ ಕೇಂದ್ರದ ನೂತನ ಕಟ್ಟಡವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.

ಇದೇ ಸಂದರ್ಭದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಸಹಕರಿಸಿದ ಉದ್ಯಮಿ ಶಕ್ತಿಪ್ರಸಾದ್ ಶೆಟ್ಟಿ ದಂಪತಿಯನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ. ತುಂಗಪ್ಪ ಬಂಗೇರ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಪ್ರಭಾಕರ ಪ್ರಭು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶೇಖರ ಶೆಟ್ಟಿ, ಮಾಜಿ ಉಪಾಧ್ಯಕ್ಷರಾದ ಬೇಬಿ ಮತ್ತು ರಶ್ಮಿತ್ ಶೆಟ್ಟಿ, ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಶೇಷಗಿರಿ ನಾಯ್ಕ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಮ್ತಾಜ್ ಹಾಗೂ ಅಂಗನವಾಡಿ ಸಹಾಯಕಿ ಬೇಬಿ ಉಪಸ್ಥಿತರಿದ್ದರು.

ಮೇಲ್ವಿಚಾರಕಿ ನೀತಾ ಕುಮಾರಿ ಡಿ. ಸ್ವಾಗತಿಸಿದರು. ಅಂಗನವಾಡಿ ಕಾರ್ಯಕರ್ತೆ ಬೇಬಿ ವಂದಿಸಿದರು. ಪ್ರಜ್ವಲ್ ಸಿದ್ಧಕಟ್ಟೆ ಕಾರ್ಯಕ್ರಮ ನಿರೂಪಿಸಿದರು.



