Breaking
26 Nov 2026, Thu

ಸರ್ವರ್ ಸಮಸ್ಯೆಯಿಂದ ಪಡಿತರ ವಿತರಣೆಗೆ ಅಡಚಣೆ: ನವೆಂಬರ್ ತಿಂಗಳ ಪಡಿತರ ಅವಧಿ ವಿಸ್ತರಣೆಗೆ ಪ್ರಭಾಕರ ಪ್ರಭು ಮನವಿ

ಬಂಟ್ವಾಳ: ನ್ಯಾಯಬೆಲೆ ಅಂಗಡಿಗಳಲ್ಲಿ ಪದೇಪದೇ ಉಂಟಾಗುತ್ತಿರುವ ಸರ್ವರ್ ಸಮಸ್ಯೆಯಿಂದ ಪಡಿತರ ಅಕ್ಕಿ ಪಡೆಯಲು ಗ್ರಾಹಕರು ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ, ನವೆಂಬರ್ ತಿಂಗಳ ಪಡಿತರ ವಿತರಣೆಯ ಅವಧಿಯನ್ನು ಡಿಸೆಂಬರ್ ಮೊದಲ ವಾರದವರೆಗೆ ವಿಸ್ತರಿಸುವಂತೆ ಮಾಜಿ ಬಂಟ್ವಾಳ ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು ಅವರು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.

ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ವಿತರಣೆ ಮಾಡುವ ಸಂದರ್ಭದಲ್ಲಿ ಸರ್ವರ್ ಸಮಸ್ಯೆ ಪದೇಪದೇ ಎದುರಾಗುತ್ತಿದೆ. ಇದರಿಂದ ಗ್ರಾಹಕರು ದಿನವಿಡೀ ಅಂಗಡಿಗಳಲ್ಲಿ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲವೆಡೆ ರಾತ್ರಿ ತನಕ ಕಾದರೂ ಪಡಿತರ ಸಿಗದೆ ಬರಿಗೈಯಲ್ಲಿ ಮನೆಗೆ ಮರಳುವಂತಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ವಿಶೇಷವಾಗಿ ಕೂಲಿ ಕೆಲಸ ಮಾಡಿ ಜೀವನ ಸಾಗಿಸುವ ಬಿಪಿಎಲ್ ಪಡಿತರ ಚೀಟಿದಾರರು ಪಡಿತರ ಪಡೆಯಲು ಕೆಲಸ ಬಿಟ್ಟು ದಿನವಿಡೀ ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ. ತಾಂತ್ರಿಕ ಸಮಸ್ಯೆಯಿಂದ ಉಂಟಾಗುತ್ತಿರುವ ವಿಳಂಬಕ್ಕೆ ನ್ಯಾಯಬೆಲೆ ಅಂಗಡಿಗಳ ಸಿಬ್ಬಂದಿ ಗ್ರಾಹಕರ ಆಕ್ರೋಶಕ್ಕೆ ಗುರಿಯಾಗುತ್ತಿದ್ದಾರೆ ಎಂದು ಅವರು ಗಮನ ಸೆಳೆದಿದ್ದಾರೆ.

ಕಳೆದ ಒಂದು ವರ್ಷದಿಂದ ಇದೇ ರೀತಿಯ ಸರ್ವರ್ ಸಮಸ್ಯೆ ಮರುಕಳಿಸುತ್ತಿದ್ದು, ಸಮಸ್ಯೆ ಮುಂದುವರಿದರೆ ಹಲವು ಫಲಾನುಭವಿಗಳು ನಿಗದಿತ ಅವಧಿಯಲ್ಲಿ ಪಡಿತರ ಪಡೆಯದೆ ವಂಚಿತರಾಗುವ ಸಾಧ್ಯತೆಯಿದೆ. ಆದ್ದರಿಂದ ನವೆಂಬರ್ ತಿಂಗಳ ಪಡಿತರ ಅಕ್ಕಿಯನ್ನು ಡಿಸೆಂಬರ್ ಮೊದಲ ವಾರದವರೆಗೂ ವಿತರಿಸಲು ಸೂಕ್ತ ಆದೇಶ ಹೊರಡಿಸಬೇಕು ಎಂದು ಪ್ರಭಾಕರ ಪ್ರಭು ಅವರು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *